ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರದ ಗುಣಮಟ್ಟ ಕಾಪಾಡಿ : ಅಧಿಕಾರಿಗಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ

Update: 2024-06-21 13:10 GMT

ಬೆಂಗಳೂರು : ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರದಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧೀ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಯೋಜನೆ ಜಾರಿಯಲ್ಲಿ ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ, ಸಂಬಂಧಪಟ್ಟ ಅಧಿಕಾರಿಗಳೆ ನೇರಹೊಣೆ ವಹಿಸಬೇಕಾಗುತ್ತದೆ ಎಂದು ಹೇಳಿದರು.

ಇಲಾಖೆಯ ಯೋಜನೆಗಳ ಜಿಲ್ಲಾವಾರು ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದ ಅವರು, ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸಲಾಗುತ್ತಿರುವ ಎಂಎಸ್‍ಪಿಸಿ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ಫೋಷಣ್ ಯೋಜನೆಯಡಿ ಹೆಚ್ಚು ಮಕ್ಕಳನ್ನು ನೋಂದಾಯಿಸಲು ತ್ವರಿತ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಮಳೆಗಾಲದ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡಬೇಕು. ಟಿಸಿ, ಮರ, ಗಿಡಗಳಿದ್ದರೆ ತೆರವುಗೊಳಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಶಿಶು ಸಂಯೋಜನಾಧಿಕಾರಿಗಳು (ಸಿಡಿಪಿಒ), ಪರಿವೀಕ್ಷಣಾ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಗ್ರಾಚ್ಯುಟಿ ಬಿಡುಗಡೆ: ಅಂಗನವಾಡಿ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಚ್ಯುಟಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಸುಮಾರು 2,537 ಕಾರ್ಯಕರ್ತೆಯರಿಗೆ ಆರ್ಥಿಕವಾಗಿ ನೆರವಾಗಲಿದೆ. ಇದಕ್ಕಾಗಿ 29.91 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಬಾಲ್ಯ ವಿವಾಹ ತಡೆಗಟ್ಟಲು ಕ್ರಮ: ಗ್ರಾಮಾಂತರ ಭಾಗದಲ್ಲಿ ಆಗುತ್ತಿರುವ ಬಾಲ್ಯವಿವಾಹ ತಡೆಗಟ್ಟಲು ತೆಗೆದುಕೊಂಡಿರುವ ಕಾರ್ಯಕ್ರಮಗಳ ಮಾಹಿತಿ ಪಡೆದ ಲಕ್ಷ್ಮಿ ಹೆಬ್ಬಾಳ್ಕರ್, ಇನ್ನು ಮುಂದೆ ರಾಜ್ಯದಲ್ಲಿ ಬಾಲ್ಯ ವಿವಾಹ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News