ಮಾಲೂರು ಶಾಸಕರ ಅನರ್ಹತೆ ಕೋರಿಕೆ: ಕೆ.ವೈ.ನಂಜೇಗೌಡಗೆ ಸಮನ್ಸ್ ನೀಡಲು ಹೈಕೋರ್ಟ್ ಆದೇಶ

Update: 2023-08-29 18:30 GMT

ಬೆಂಗಳೂರು, ಆ.29: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಕೆ.ವೈ.ನಂಜೇಗೌಡ ಆಯ್ಕೆಯಾಗಿರುವುದನ್ನು ರದ್ದು ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಪ್ರತಿವಾದಿಗಳಿಗೆ ಹ್ಯಾಂಡ್ ಸಮನ್ಸ್ ಜಾರಿ ಮಾಡಲು ಅರ್ಜಿದಾರರಿಗೆ ಹೈಕೋರ್ಟ್ ಅನುಮತಿ ನೀಡಿದೆ.

ಶಾಸಕ ಕೆ.ವೈ.ನಂಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಎಸ್.ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.

ಸಮನ್ಸ್ ಜಾರಿಯಾದ ನಂತರದ ಒಂದು ವಾರದಲ್ಲಿ ಪ್ರತಿವಾದಿಗಳು ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸಬೇಕು. ಹಾಗೆಯೇ, ಮೊದಲನೆ ಪ್ರತಿವಾದಿಯಾಗಿರುವ ಶಾಸಕ ಕೆ.ವೈ. ನಂಜೇಗೌಡ ಅವರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಸೆ.11ಕ್ಕೆ ಮುಂದೂಡಿತು.

ಪ್ರಕರಣವೇನು?: ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಕೆ.ವೈ. ನಂಜೇಗೌಡ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಒಂದೇ ಕೊಠಡಿಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಬೇಕಿದ್ದು, ಎರಡು ಪ್ರತ್ಯೇಕ ಕೊಠಡಿಯಲ್ಲಿ ಮತ ಎಣಿಕೆ ಮಾಡಲಾಗಿದೆ. ಆ ಮೂಲಕ ಜನಪ್ರತಿನಿಧಿಗಳ ಕಾಯ್ದೆಯ ನಿಯಮಗಳು ಮತ್ತು ಚುನಾವಣಾ ಆಯೋಗ ಪ್ರಕಟಿಸಿದ್ದ ನಿಯಮಗಳ ಉಲ್ಲಂಘಿಸಲಾಗಿದೆ. ಹೀಗಾಗಿ ನಂಜೇಗೌಡ ಅವರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಚುನಾವಣಾ ಆಯೋಗದ ಕ್ರಮ ರದ್ದುಪಡಿಸಬೇಕು. ಅμÉ್ಟೀ ಅಲ್ಲದೆ, ಕ್ಷೇತ್ರದ ಮತಗಳನ್ನು ಮರು ಎಣಿಕೆಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News