ರಾಜಭವನಕ್ಕೆ ಹುಸಿ ಬಾಂಬ್ ಕರೆ: ಆರೋಪಿ ಭಾಸ್ಕರ್ ಬಂಧನ

Update: 2023-12-13 06:53 GMT

ಭಾಸ್ಕರ್ 

ಬೆಂಗಳೂರು: ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ರಾಷ್ಟ್ರೀಯ ತನಿಖಾ ದಳ (NIA) ಸಹಾಯವಾಣಿಗೆ ಕರೆ ಮಾಡಿ ಹುಸಿ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ವಡ್ಡಹಳ್ಳಿ ನಿವಾಸಿ ಭಾಸ್ಕರ್ ಬಂಧಿತ ಆರೋಪಿ.

ಆರೋಪಿಯು ಸೋಮವಾರ ಬೆಂಗಳೂರಿಗೆ ಬಂದಿದ್ದ. ಈ ವೇಳೆ ಗೂಗಲ್ ನಲ್ಲಿ NIA ನಂಬರ್ ಪಡೆದು ನಂತರ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಈ ನಡುವೆ ಆರೋಪಿ ಬೆಂಗಳೂರಿನಿಂದ ನೇರವಾಗಿ ಆಂಧ್ರದ ಚಿತ್ತೂರಿನ ದೇವಸ್ಥಾನವೊಂದಕ್ಕೆ ತೆರಳಿದ್ದಾನೆ. ಬಾಂಬ್ ಬೆದರಿಕೆ ಕರೆ ಬಂದಿದ್ದ ಫೋನ್ ನಂಬರ್' ನ ನೆಟ್ ವರ್ಕ್ ಟ್ರ್ಯಾಕ್ ಮಾಡಿದ ಪೊಲೀಸರು, ಆರೋಪಿ ಭಾಸ್ಕರ್ ನನ್ನು ಆಂಧ್ರದಲ್ಲಿ ಬಂಧಿಸಿದ್ದಾರೆ.

ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಸೋಮವಾರ ರಾತ್ರಿ 11:30ರ ಸುಮಾರಿಗೆ ನಗರದ ದೊಮ್ಮಲೂರಿನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕಚೇರಿಯ ನಿಯಂತ್ರಣ ಕೊಠಡಿಗೆ ಅನಾಮಧೇಯ ಕರೆಯೊಂದು ಬಂದಿದ್ದು ರಾಜಭವನದ ಆವರಣದಲ್ಲಿಟ್ಟಿರುವ ಬಾಂಬ್ ಕೆಲವೇ ಕ್ಷಣಗಳಲ್ಲಿ ಸ್ಫೋಟಿಸಲಿದೆ ಎಂದು ತಿಳಿಸಿ ಕರೆಯನ್ನು ಸ್ಥಗಿತಗೊಳಿಸಲಾಗಿತ್ತು.

ಕರೆ ಬಂದ ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದ ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೂ ಮಾಹಿತಿ ರವಾನಿಸಿದ್ದಾರೆ. ನಂತರ 12 ಗಂಟೆ ಸುಮಾರಿಗೆ ಪೊಲೀಸರು, ಬಾಂಬ್ ನಿಷ್ಕ್ರೀಯ ದಳ, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಧಾವಿಸಿ ರಾಜಭವನದ ಸುತ್ತಮುತ್ತಾ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ದೊರೆತಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಕರೆ ಎಂಬುದು ತಿಳಿದುಬಂದಿತ್ತು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News