ಬೆಂಗಳೂರಿನ ಅವ್ಯವಸ್ಥೆಗಳ ವಿರುದ್ಧ ಮೇ.28ರಂದು ಬೃಹತ್ ಪ್ರತಿಭಟನೆ : ಬಿ.ವೈ.ವಿಜಯೇಂದ್ರ

Update: 2024-05-24 12:36 GMT

ಬೆಂಗಳೂರು : ಬೆಂಗಳೂರಿನ ಅವ್ಯವಸ್ಥೆಗಳ ವಿರುದ್ಧ ಇದೇ ಮೇ.28ರಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಕಟಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ತಮ್ಮ ನೇತೃತ್ವದಲ್ಲಿ ಇಂದು ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚೆಗಾಗಿ ನಡೆಸಿದ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಬೆಂಗಳೂರು ನಗರದ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರತಿ ವಾರ್ಡಿನಲ್ಲಿ ಬಿಜೆಪಿ ವತಿಯಿಂದ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು.

ಬೆಂಗಳೂರು ಮಹಾನಗರದ ಜನತೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ. ಕೇವಲ ನಾಮಕಾವಾಸ್ತೆ ಹೋರಾಟ ಇದಲ್ಲ. ಸಮಸ್ಯೆಗೆ ಪರಿಹಾರ, ಹೋರಾಟಕ್ಕೆ ಜಯ ಸಿಗಬೇಕಿದೆ. ಆ ನಿಟ್ಟಿನಲ್ಲಿ ಹೋರಾಟ ನಡೆಯಲಿದೆ ಎಂದು ವಿವರಿಸಿದರು.

ಇಂದು ನಗರದ ಎಲ್ಲ ಶಾಸಕರು, ಮಾಜಿ ಶಾಸಕರು, ಮಾಜಿ ಕಾರ್ಪೊರೇಟರ್ ಗಳ ಸಭೆಯನ್ನು ನಡೆಸಲಾಗಿದೆ. ಬೆಂಗಳೂರು ನಗರದ ಅವ್ಯವಸ್ಥೆಗಳನ್ನು ಚರ್ಚಿಸಿದ್ದೇವೆ. ಕೇವಲ ಎರಡು ದಿನ ಮಳೆ ಬಂದಾಗ ಬೆಂಗಳೂರಿನ ರಸ್ತೆಗಳು ವಾಹನ ಓಡಾಡದಂತೆ ಬ್ಲಾಕ್ ಆಗಿದ್ದವು. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ಜನರಿದ್ದಾರೆ. ರಾಜ್ಯದಲ್ಲಿ ಹೊಸ ಸರಕಾರ ಬಂದ ಬಳಿಕ ಒಂದು ವರ್ಷದಲ್ಲಿ ಬೆಂಗಳೂರು ನಗರದ ಅಭಿವೃದ್ಧಿಗೆ ಒಂದೇ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ ಎಂದು ಟೀಕಿಸಿದರು.

ರಸ್ತೆಗಳು ಗುಂಡಿಗಳಿಂದ ತುಂಬಿ ಹೋಗಿವೆ. ಕಸ ವಿಲೇವಾರಿಯೂ ಸರಿಯಾಗಿ ಆಗುತ್ತಿಲ್ಲ. ಬೆಂಗಳೂರಿಗೆ ಅತಿ ಹೆಚ್ಚು ಸಚಿವರಿದ್ದರೂ ಈ ನಗರದ ಅಭಿವೃದ್ಧಿ ಕುರಿತು ಯಾರು ಕೂಡ ಚಿಂತನೆ ಮಾಡದೆ ಇರುವುದು ನಿಜವಾಗಿ ಒಂದು ದುರಂತ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News