ರಾಜ್ಯದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ

Update: 2024-04-27 13:40 GMT

ಬೆಂಗಳೂರು: ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಒಣಹವೆ ಮುಂದುವರೆಯಲಿದೆ. ಒಂದು ವಾರದೊಳಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎ.28 ಮತ್ತು ಎ.29ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎ.30ರಂದು ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಮೈಸೂರು, ಬೆಳಗಾವಿ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಮೇ 1ರಂದು ರಾಯಚೂರು, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳು ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಮೇ 2 ಮತ್ತು ಮೇ 3ರಂದು ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಶಾಖದ ಅಲೆ: ಎ.28ರಿಂದ ಮೇ 1ರವರೆಗೆ ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆದ್ರ್ರತೆ: ಎ.27 ರಿಂದ ಮೇ 1 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆದ್ರ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಶಾಖದ ಅಲೆಯಿಂದ ಎಚ್ಚರಿಕೆ ವಹಿಸಲು ಸೂಚನೆ: ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡುವ ಜನರಲ್ಲಿ ಹೆಚ್ಚಿನ ತಾಪಮಾನ ಮತ್ತು ಶಾಖದ ಕಾಯಿಲೆಯ ಲಕ್ಷಣಗಳು ಸಂಭವಿಸಬಹುದು. ಮಕ್ಕಳು, ವೃದ್ಧರು, ದೀರ್ಘಕಾಲದ ಕಾಯಿಲೆಗಳಿರುವ ಜನರಂತಹ ದುರ್ಬಲ ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.

ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 3ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು.

ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲ್‍ಗಳನ್ನು ಬಳಸಬೇಕು. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಬೇಕು.

ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು.

ಓಆರ್ ಎಸ್, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ(ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು-ಜಲೀಕರಣ ಮಾಡಲು ಸಹಾಯ ಮಾಡುತ್ತದೆ. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಬೇಕು.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ತಾಪಮಾನವು 37 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News