ಕೇಂದ್ರ ಸಚಿವರೊಂದಿಗೆ ರಾಜ್ಯದ ಬೇಡಿಕೆಗಳ ಕುರಿತು ಎಂ.ಬಿ.ಪಾಟೀಲ್ ಚರ್ಚೆ
ಹೊಸದಿಲ್ಲಿ : ರಾಜ್ಯದ ಕೈಗಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರ ಸರಕಾರದ ಸಹಕಾರ ಕೋರಿ ಮತ್ತು ಅಗತ್ಯ ಬಂಡವಾಳ ಹೂಡಿಕೆ ನಿರೀಕ್ಷಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮಂಗಳವಾರ ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
2025ರ ಫೆಬ್ರವರಿ 12ರಿಂದ 14ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಎಂ.ಬಿ.ಪಾಟೀಲ್, ದಿಲ್ಲಿಗೆ ಎರಡು ದಿನಗಳ ಭೇಟಿ ನೀಡಿದ್ದಾರೆ. ಮೊದಲಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಅವರು, ರಕ್ಷಣಾ ಸಾಧನಗಳ ಉತ್ಪಾದನೆ ಮತ್ತು ಅವುಗಳ ರಫ್ತಿನ ಮೇಲೆ ಇರುವ ನಿರಬಂಧ ತೆರವು, ಡಿಫೆನ್ಸ್ ಕಾರಿಡಾರ್ ಸ್ಥಾಪನೆಯ ಅಗತ್ಯ ಕುರಿತು ಚರ್ಚೆ ನಡೆಸಿದರು.
ಜೊತೆಗೆ, ರಾಜ್ಯದಲ್ಲಿರುವ ಬಿಎಚ್‍ಇಎಲ್ ಮತ್ತು ಬಿಇಎಂಎಲ್ ತರಹದ ಕೇಂದ್ರೋದ್ಯಮಗಳಲ್ಲಿ ಹೂಡಿಕೆ ಹೆಚ್ಚಳಕ್ಕೆ ಉತ್ತೇಜನ ಮತ್ತು ಕಾರವಾರದ ನೌಕಾ ವೈಮಾನಿಕ ನಿಲ್ದಾಣದ ರನ್-ವೇಯನ್ನು ಈಗಿರುವ 2 ಕಿ.ಮೀ.ನಿಂದ 2.7 ಕಿ.ಮೀ.ವರೆಗೆ ವಿಸ್ತರಿಸಲು ಬೇಕಾಗಿರುವ ನೆರವಿನ ಬಗ್ಗೆ ಎಂ.ಬಿ.ಪಾಟೀಲ್ ಚರ್ಚಿಸಿದರು.
ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಿ, ಮೇಲಿನ ಸಂಗತಿಗಳ ಜತೆಗೆ ಕರ್ನಾಟಕದ ಕೈಗಾರಿಕಾ ವಲಯದ ಬೆಳವಣಿಗೆಗೆ ಅಗತ್ಯವಿರುವ ನಿರ್ಣಾಯಕ ನೆರವಿನ ಕುರಿತು ಎಂ.ಬಿ.ಪಾಟೀಲ್ ವಿಚಾರ ವಿನಿಮಯ ನಡೆಸಿದರು.
ಅಲ್ಲದೆ, ಇ.ವಿ.ವಲಯದಲ್ಲಿ ನವೋದ್ಯಮಗಳಿಗೆ 10 ಸಾವಿರ ಕೋಟಿ ರೂ. ಪೂರೈಸಲು ಎದುರಾಗಿರುವ ಸವಾಲು, ಫೇಮ್-3 ಯೋಜನೆಯ ಜಾರಿಯಲ್ಲಿ ಆಗುತ್ತಿರುವ ವಿಳಂಬ, ರಕ್ಷಣಾ ತಂತ್ರಜ್ಞಾನ ಹಬ್ ಗಳ ಸ್ಥಾಪನೆಯ ಅಗತ್ಯ, ಬೆಂಗಳೂರು ಗ್ರಾಮಾಂತರದಲ್ಲಿ ಇಎಂಸಿ ಕ್ಲಸ್ಟರ್ ಸ್ಥಾಪನೆಗೆ ಬಾಕಿ ಇರುವ ಅನುಮೋದನೆ ಕುರಿತು ಅವರು ಚರ್ಚೆ ನಡೆಸಿದರು.
ಹಾರೋಹಳ್ಳಿ, ಕುಡುತಿನಿ ಮತ್ತು ದೇವಕತ್ತಿಕೊಪ್ಪದಲ್ಲಿ ಕೈಗಾರಿಕಾ ಯೋಜನೆಗಳಿಗೆ ಬಾಕಿ ಇರುವ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ, ಸೆಮಿಕಂಡಕ್ಟರ್ ಕಂಪನಿ ಸ್ಥಾಪನೆಯ ತುರ್ತು ಮತ್ತು ಕೇಂದ್ರವು ಇತ್ತೀಚೆಗೆ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ರೂಪಿಸಿರುವ 12 ಸ್ಮಾರ್ಟ್ ಸಿಟಿ ಯೋಜನೆಯಿಂದ ಕರ್ನಾಟಕವನ್ನು ಹೊರಗಿಟ್ಟಿರುವುದರ ಬಗ್ಗೆ ಅವರು ಮಾತುಕತೆ ನಡೆಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಮಾತುಕತೆ ನಡೆಸಿದ ಎಂ.ಬಿ.ಪಾಟೀಲ್, ಬೇಗನೆ ಹಾಳಾಗುವಂತಹ ಪದಾರ್ಥಗಳನ್ನು ವಿಮಾನದ ಮೂಲಕ ಹೊರದೇಶಗಳಿಗೆ ಕಳುಹಿಸುತ್ತಿರುವ ಸಣ್ಣ ಪ್ರಮಾಣದ ರಫ್ತುದಾರರ ಮೇಲೆ ಹೇರಿರುವ ಜಿಎಸ್‍ಟಿ ತೆರಿಗೆಯನ್ನು ರದ್ದುಪಡಿಸಬೇಕು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಆಮದಿನ ಮೇಲೆ ಈಗ ಇರುವ ಭಾರಿ ಆಮದು ತೆರಿಗೆ ಮತ್ತು ಸುಂಕವನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.
ಸಿಂಗಪುರ್ ಹೈಕಮಿಷನರ್ ಭೇಟಿ: ‘ಸಿಂಗಾಪುರ್ ಹೈಕಮಿಷನರ್ ಸೈಮನ್ ವಾಂಗ್ ಅವರನ್ನು ಭೇಟಿಯಾದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಫೆಬ್ರವರಿಯಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದರು.
ಇತ್ತೀಚೆಗೆ ಭಾರತ ಮತ್ತು ಸಿಂಗಪುರ್ ಸೆಮಿಕಂಡಕ್ಟರ್, ಡಿಜಿಟಲ್ ಸಹಕಾರ, ಆರೋಗ್ಯ ಸೇವೆ, ವೈದ್ಯಕೀಯ ಸಂಶೋಧನೆ, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರಕ್ಕೆ ಮಾಡಿಕೊಂಡಿರುವ ಒಡಂಬಡಿಕೆ ಕುರಿತು ಈ ವೇಳೆ ಅವರು ಚರ್ಚಿಸಿದರು.
ಇದಕ್ಕೆ ಸ್ಪಂದಿಸಿದ ಹೈಕಮಿಷನರ್, ನೆಟ್-ಜೀರೋ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸಲು ತಮಗಿರುವ ಆಸಕ್ತಿಯನ್ನು ವ್ಯಕ್ತಪಡಿಸಿದರು. ಜತೆಗೆ ಡೇಟಾ ಕೇಂದ್ರಗಳು, ಎಂಆರ್ ಓ, ವೈದ್ಯಕೀಯ ಉಪಕರಣಗಳು ಮತ್ತು ಔಷಧ ಕಂಪನಿಗಳಲ್ಲಿ ಹೂಡಿಕೆ ಮಾಡಲು ತಮ್ಮ ದೇಶದ ಕಂಪನಿಗಳಿರುವ ಒಲವನ್ನು ಹಂಚಿಕೊಂಡರು.