ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ |ಬಲವಂತದ ಸಾಲ ವಸೂಲು ನಿಯಂತ್ರಿಸಲು ಬಲಿಷ್ಠ ಕಾಯ್ದೆ ರಚಿಸಲು ರಾಜ್ಯ ಸರಕಾರ ತೀರ್ಮಾನ

Update: 2025-01-30 20:40 IST
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ |ಬಲವಂತದ ಸಾಲ ವಸೂಲು ನಿಯಂತ್ರಿಸಲು ಬಲಿಷ್ಠ ಕಾಯ್ದೆ ರಚಿಸಲು ರಾಜ್ಯ ಸರಕಾರ ತೀರ್ಮಾನ
  • whatsapp icon

ಬೆಂಗಳೂರು : ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.

ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಚರ್ಚಿಸಲು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಮೇಲ್ಕಂಡ ತಿರ್ಮಾನ ಕೈಗೊಳ್ಳಲಾಗಿದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧರಿಸಲಾಗಿದೆ. ಈ ಕುರಿತು ಕಾನೂನು ಇಲಾಖೆ ಹಾಗೂ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಕಾಯ್ದೆ ಸಂಪೂರ್ಣ ಸಂವಿಧಾನಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು. ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಒಂಬುಡ್ಸ್‌ ಮೆನ್‍ಗಳ ನೇಮಕ ಮಾಡಲಾಗುವುದು. ಅಮಾನವೀಯವಾಗಿ ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ ಸಿಗಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ನೋಂದಣಿಯಾಗದ ಲೇವಾದೇವಿಗಾರರ ಕಿರುಕುಳವನ್ನು ತಪ್ಪಿಸಲು ಕಠಿಣ ಕಾನೂನು ಜಾರಿ ಮಾಡಲಾಗುತ್ತಿದೆ. ಪ್ರಸ್ತುತವಿರುವ ಕಾನೂನಿನಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ನಿಯಂತ್ರಿಸಲು ಹಲವು ಅವಕಾಶಗಳಿದ್ದು, ಅದನ್ನು ಯಾಕೆ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ದೂರು ದಾಖಲು ಮಾಡುವ ತನಕ ಕಾಯದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಅಲೋಕ್ ಮೋಹನ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹ್ಮದ್, ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News