ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ : ಸಚಿವ ಭೋಸರಾಜು

ಎನ್.ಎಸ್.ಭೋಸರಾಜು
ಬೆಂಗಳೂರು : ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಾಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.
ಶುಕ್ರವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿ, ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ತಾರತಮ್ಯ ಹಾಗೂ ಹಸ್ತಕ್ಷೇಪ ಹೇಗೆ ಸಾಧ್ಯ? ಈ ನಿಟ್ಟಿನಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ಹೇಳಿದರು.
ನಿನ್ನೆ ನಡೆದ ಸಭೆಯಲ್ಲಿ, ರಾಜ್ಯ ಗುತ್ತಿಗೆದಾರರಲ್ಲಿ ಉಂಟಾಗಿದ್ದ ಗೊಂದಲಗಳನ್ನು ಪರಿಹರಿಸಲಾಗಿದೆ. 2023-24ನೇ ಆರ್ಥಿಕ ವರ್ಷದಲ್ಲಿ ಬಿಜೆಪಿ ಸರಕಾರ, ಹಣಕಾಸಿನ ಲಭ್ಯತೆ ಇಲ್ಲದೇ ಇದ್ದರೂ ಪ್ರಾರಂಭಿಸಿದ್ದ, 12,693 ಕೋಟಿ ರೂಪಾಯಿ ಮೌಲ್ಯದ 15,549 ಕಾಮಗಾರಿಗಳನ್ನು ನಾವು ಮುಂದುವರೆಸಿದ್ದೇವೆ. ಈ ವರ್ಷದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸದೆ, ಹಳೆಯ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಅವರು ತಿಳಿಸಿದರು.
ಹಿಂದಿನ ಸರಕಾರ ಹಣಕಾಸಿನ ಲಭ್ಯತೆಯನ್ನು ತೋರಿಸದೇ, ಅವೈಜ್ಞಾನಿಕವಾಗಿ ಅನುಮತಿ ನೀಡಲಾಗಿದ್ದ ಕಾಮಗಾರಿಗಳನ್ನು ಮುಂದುವರೆಸಲು ಹಾಗೂ ತೊಂದರೆಯಲ್ಲಿದ್ದ ಗುತ್ತಿಗೆದಾರರನ್ನು ಕಾಪಾಡುವ ನಿಟ್ಟಿನಲ್ಲಿ 2000 ಗುತ್ತಿಗೆದಾರರಲ್ಲಿ, 639 ಗುತ್ತಿಗೆದಾರರಿಗೆ ಬಾಕಿ ಇದ್ದ ಸಂಪೂರ್ಣ ಹಣವನ್ನು ಬಿಡುಗಡೆ ಮಾಡಲಾಗಿದೆ. ಉಳಿದ 1361 ಗುತ್ತಿಗೆದಾರರಿಗೆ ಭಾಗಶಃ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
2024-25ನೇ ಆರ್ಥಿಕ ವರ್ಷದಲ್ಲಿ 9,974.34 ಕೋಟಿ ರೂಪಾಯಿ ಮೌಲ್ಯದ 13,913 ಸ್ಪಿಲ್ ಓವರ್ (ಮುಂದುವರೆದ) ಕಾಮಗಾರಿಗಳು ಚಾಲ್ತಿಯಲ್ಲಿದ್ದವು. ಕಾಮಗಾರಿಗಳ ಅಗಾಧದತೆ ಹಾಗೂ ಗುತ್ತಿಗೆದಾರರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಹೆಚ್ಚುವರಿ ಅನುದಾನ ಮಂಜೂರಾಯಿತು ಎಂದು ಭೋಸರಾಜು ಹೇಳಿದರು.
ಪ್ರಸಕ್ತ ಸಾಲಿನ ಫೆಬ್ರವರಿ ತಿಂಗಳ ವೇಳೆಗೆ ಬಾಕಿಯಿದ್ದ ಬಿಲ್ ಹಣ 3,352.06 ಕೋಟಿ ರೂಪಾಯಿಗಳು. ಒಟ್ಟಾರೆಯಾಗಿ ಕೈಗೊಳ್ಳಲಾಗಿದ್ದ ಕಾಮಗಾರಿಗಳು 3,176 ಇದರಲ್ಲಿ 267 ಗುತ್ತಿಗೆದಾರರಿಗೆ ಬಾಕಿಯಿದ್ದ ಸಂಪೂರ್ಣ ಹಣವನ್ನು ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಲಾಯಿತು ಎಂದು ಅವರು ಮಾಹಿತಿ ನೀಡಿದರು.
ನಮ್ಮ ಇಲಾಖೆಯಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಎಲ್ಲಾ ಕಾಮಗಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ. ಯಾವುದೇ ಒಬ್ಬ ಗುತ್ತಿಗೆದಾರರು, ಕಾಮಗಾರಿಗೆ ಹಣ ಬಿಡುಗಡೆ ಆಗಿಲ್ಲ ಎನ್ನುವುದನ್ನು ತೋರಿಸಲಿ ಎಂದು ಅವರು ಸವಾಲು ಹಾಕಿದರು.
ಕಾಮಗಾರಿಗಳು ಸಕಾಲದಲ್ಲಿ ಮುಗಿಯಬೇಕು ಹಾಗೂ ಗುತ್ತಿಗೆದಾರರು ಗುಣಮಟ್ಟದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎನ್ನುವ ಉದ್ದೇಶದಿಂದ ನಾವು ಅನುದಾನದ ಲಭ್ಯತೆಯನ್ನು ನೋಡಿಕೊಂಡು ಹಣ ಬಿಡುಗಡೆ ಮಾಡುತ್ತಿದ್ದೇವೆ. ಬಾಕಿ ಇರುವ ಎಲ್ಲಾ ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಿರುವ ಹಿನ್ನಲೆಯಲ್ಲಿ ಜ್ಯೇಷ್ಠತೆಯ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು ಭೋಸರಾಜು ತಿಳಿಸಿದರು.
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮಾಡಿರುವಂತಹ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಅಂತಹ ಘಟನೆಗಳು ಇದ್ದಲ್ಲಿ ಸಕ್ಷಮ ಪ್ರಾಧಿಕಾರದಲ್ಲಿ ದೂರು ಸಲ್ಲಿಸುವಂತೆಯೂ ತಿಳಿಸಲಾಗಿದೆ. ನಿನ್ನೆ ನಡೆದ ಸಭೆಯಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಲ್ಲಿ ಇದ್ದಂತಹ ಎಲ್ಲಾ ಗೊಂದಲಗಳನ್ನು ನಿವಾರಿಸಲಾಗಿದೆ ಎಂದು ಭೋಸರಾಜು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಕಾರ್ಯದರ್ಶಿ ರಾಘವನ್ ಉಪಸ್ಥಿತರಿದ್ದರು.