ಬಗರ್ ಹುಕುಂ ಅರ್ಹರಿಗೆ ಡಿಸೆಂಬರ್‌ನಲ್ಲಿ ಭೂ ಸಾಗುವಳಿ ಚೀಟಿ : ಸಚಿವ ಕೃಷ್ಣ ಭೈರೇಗೌಡ

Update: 2024-11-14 15:32 GMT

ಕೃಷ್ಣ ಭೈರೇಗೌಡ

ಬೆಂಗಳೂರು : ಬಡವರಿಗೆ ಭೂ ಮಂಜೂರುಗೊಳಿಸುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ-ಅನರ್ಹ ಅರ್ಜಿಗಳನ್ನು ಎಲ್ಲ ತಹಶೀಲ್ದಾರರೂ ನ.25ರೊಳಗೆ ವಿಂಗಡಿಸಿ ಪಟ್ಟಿ ಮಾಡಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ನ.26ರ ಬೆಳಗ್ಗೆಯೇ ಇಡೀ ಜಿಲ್ಲೆಯ ಪಟ್ಟಿಯನ್ನು ಒಂದುಗೂಡಿಸಿ ನನಗೆ ಸಲ್ಲಿಸಬೇಕು. ಡಿಸೆಂಬರ್ ಮೊದಲ ವಾರದಲ್ಲಿ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಡಿಜಿಟಲ್ ಭೂ ಸಾಗುವಳಿ ಚೀಟಿ ನೀಡಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಾಕೀತು ಮಾಡಿದ್ದಾರೆ.

ರಾಜ್ಯದ ಎಲ್ಲ ತಹಶೀಲ್ದಾರರ ಜೊತೆ ವಿಕಾಸಸೌಧದಿಂದ ಗುರುವಾರ ವಿಡಿಯೋ ಕಾನ್ಸರೆನ್ಸ್ ಮೂಲಕ ಸಭೆ ನಡೆಸಿ ಬಗರ್ ಹುಕುಂ ಅರ್ಜಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ತಪ್ಪಿದರೆ ಎಲ್ಲರಿಗೂ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಗರ್ ಹುಕುಂ ಬಡವರ ಕೆಲಸ. ಬಡ ರೈತರಿಗೆ ಶೀಘ್ರ ಭೂ ಮಂಜೂರು ಮಾಡಬೇಕು ಎಂದು ರೈತಪರ ಸಂಘಟನೆಗಳು ದಶಕಗಳಿಂದ ಹೋರಾಡುತ್ತಿವೆ. ಈ ಬಗ್ಗೆ ಸರಕಾರಕ್ಕೂ ಬದ್ಧತೆ ಇದ್ದು, ರೈತ ಹೋರಾಟಗಾರರ ದ್ವನಿಗೆ ಕಿವಿಗೊಡುವ ಅವರ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಉತ್ತರದಾಯಿತ್ವ ನನ್ನ ಮೇಲೂ ಇದೆ ಎಂದು ಅವರು ಹೇಳಿದರು.

ಬಗರ್ ಹುಕುಂ ಕೆಲಸಗಳಿಗೆ ಚುರುಕು ಮುಟ್ಟಿಸಬೇಕು ಎಂಬ ಕಾರಣದಿಂದಲೇ ನಾನು ಒಂದು ವರ್ಷದಿಂದ ವೈಯಕ್ತಿಕವಾಗಿ ಎಲ್ಲ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ. ರಾಜ್ಯದ ಎಲ್ಲ ತಹಶೀಲ್ದಾರರ ಜೊತೆ ಪ್ರತಿ ತಿಂಗಳೂ ವಿಡಿಯೋ ಕಾನ್ಸರೆನ್ಸ್ ಮೂಲಕವೂ ಸಭೆ ನಡೆಸಿ ಪ್ರಗತಿ ಪರಿಶೀಲಿಸುತ್ತಿದ್ದೇನೆ. ಆದರೂ ಕೆಲವು ತಹಶೀಲ್ದಾರರು ಬಡವರ ಕೆಲಸದ ಬಗ್ಗೆ ಅಸಡ್ಡೆ ಧೋರಣೆ ತೋರುತ್ತಿರುವುದು ವಿಷಾದನೀಯ ಎಂದು ಕೃಷ್ಣ ಭೈರೇಗೌಡ ಅಸಮಾಧಾನ ಹೊರಹಾಕಿದರು.

ಬಡವರ ಕೆಲಸದ ಬಗ್ಗೆ ಅಧಿಕಾರಿ ವರ್ಗದಿಂದ ಈ ಮಟ್ಟದ ಅಸಡ್ಡೆಯನ್ನು ನಾನು ನಿರೀಕ್ಷಿಸಿರಲಿಲ್ಲ. ರಾಜ್ಯದ ಒಟ್ಟಾರೆ 14 ಲಕ್ಷ ರೈತರು ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಅರ್ಜಿಗಳ ಪೈಕಿ ಅರ್ಹ ಅರ್ಜಿ ಯಾವುದು? ಅನರ್ಹ ಅರ್ಜಿ ಯಾವುದು? ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಒಂದೂವರೆ ವರ್ಷ ಬೇಕಾ ಎಂದು ಕೃಷ್ಣ ಭೈರೇಗೌಡ ಕಿಡಿಕಾರಿದರು.

ಬಗರ್ ಹುಕ್ಕುಂ ಅರ್ಹ-ಅನರ್ಹತೆಯ ಮಾನದಂಡ: ರಾಜ್ಯಾದ್ಯಂತ ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ 14ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಅನರ್ಹ ಅರ್ಜಿಗಳ ಸಂಖ್ಯೆಯೇ ಅಧಿಕವಾಗಿದೆ. ಹೀಗಾಗಿ ಅರ್ಜಿಗಳನ್ನು ಅನರ್ಹ ಎಂದು ನಿರ್ಧರಿಸಲು ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಅರ್ಜಿದಾರರು ನಿರ್ದಿಷ್ಟ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿಲ್ಲ, ನಿರ್ದಿಷ್ಟ ಪ್ರದೇಶದಲ್ಲಿ ಗೋಮಾಳ ಭೂಮಿ ಅಧಿಕ ಇಲ್ಲ, ಅರಣ್ಯ ಭೂಮಿಯನ್ನು ಕೋರಿ ಸಾಗುವಳಿಗೆ ಅರ್ಜಿ ಸಲ್ಲಿಸಿದ್ದರೆ, ಅರ್ಜಿದಾರರ ಹೆಸರಿನಲ್ಲಿ ಈಗಾಗಲೇ 4.38 ಎಕರೆಗೂ ಅಧಿಕ ಜಮೀನು ಇದ್ದರೆ, ಅರ್ಜಿದಾರರು ಭೂಮಿ ಕೋರಿ ಅರ್ಜಿ ಸಲ್ಲಿಸಿರುವ ಪ್ರದೇಶದಲ್ಲಿ ವಾಸ ಇಲ್ಲದಿದ್ದರೆ, ಅರ್ಜಿಯೇ ನಕಲು ಆಗಿದ್ದರೆ ಅಥವಾ ಅರ್ಜಿದಾರರು ಅಧಿಕಾರಿಗಳ ಕೈಗೆ ಸಿಗದಿದ್ದರೆ ಅಂತಹ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗುವುದು. ಇದರ ಹೊರತಾಗಿ ಬೇರೆ ಸ್ವರೂಪದ ಸಮಸ್ಯೆಗಳು ಕಂಡುಬಂದರೆ ಅದನ್ನೂ ಸಹ ಪಟ್ಟಿಮಾಡಿ ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಸಚಿವ ಕೃಷ್ಣ ಭೈರೇಗೌಡ ತಹಶೀಲ್ದಾರರಿಗೆ ಸೂಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News