ಕೇಂದ್ರ ಸಚಿವರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ
ಹೊಸದಿಲ್ಲಿ : ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಅವರು ಸೋಮವಾರ ಹೊಸದಿಲ್ಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿ, ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಸಲ್ಲಿಸಿದರು.
ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು, ಮಕ್ಕಳಿಗೆ ಪೌಷ್ಠಿಕ ಆಹಾರ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್ ಕೆಜಿ, ಯುಕೆಜಿ) ನೀಡಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.
ಕೇಂದ್ರ ಸಹಭಾಗಿತ್ವದ ವಿವಿಧ ಯೋಜನೆಗಳ ಜಾರಿಗೆ ರಾಜ್ಯಕ್ಕೆ ಬಿಡುಗಡೆ ಆಗಬೇಕಿರುವ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರಲ್ಲದೆ, ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಅಕ್ಕಿ, ಗೋಧಿಯನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೌಕರ್ಯ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನದ ನೆರವು ಅಗತ್ಯವಿದೆ. ಹಾಗಾಗಿ, ತುರ್ತಾಗಿ ಅನುದಾನವನ್ನು ಬಿಡುಗಡೆ ಮಾಡಬೇಕು. ಪ್ರಮುಖವಾಗಿ ರಾಜ್ಯದಲ್ಲಿ ಹೊಸದಾಗಿ ಸೃಜನೆಗೊಂಡ ತಾಲ್ಲೂಕುಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ವಿವಿಧ ಸೌಲಭ್ಯಗಳನ್ನು ಕೂಡಲೇ ಮಂಜೂರು ಮಾಡುವಂತೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಜಿ.ಸಿ. ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಕೇಂದ್ರ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಜರಿದ್ದರು.