ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಗಳಿಗೆ ಆಧುನಿಕ ತಂತ್ರಜ್ಞಾನ ಬಳಕೆ : ಸಚಿವ ಎಂ.ಸಿ.ಸುಧಾಕರ್

Update: 2024-08-01 16:42 GMT

PC : x/@drmcsudhakar

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ)ವತಿಯಿಂದ ನಡೆಸುವ ಪರೀಕ್ಷೆಗಳಿಗೆ ವೆಬ್ ಕಾಸ್ಟಿಂಗ್ ಮೂಲಕ ಆಧುನಿಕ ತಂತ್ರಜ್ಞಾನಗಳೊಂದಿಗೆ ಎಐ ಸಿಸಿ ಕ್ಯಾಮೆರಾಗಳನ್ನು ಬಳಕೆ ಮಾಡಲಾಗುವುದು. ಇದಕ್ಕಾಗಿ 10ಕೋಟಿ ರೂ. ಟೆಂಡರ್ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿರುವ ಕೆಇಎ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರವು ವಿವಿಧ ಕೋರ್ಸ್‍ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಜೊತೆ ವಿವಿಧ ಇಲಾಖೆಗಳು ಕೋರಿಕೆ ಸಲ್ಲಿಸುವ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಪರೀಕ್ಷೆಗಳು ಅತ್ಯಂತ ಪಾರದರ್ಶಕತೆಯಿಂದ ನಡೆಸುವುದು ಪ್ರಾಧಿಕಾರದ ಆದ್ಯ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಾಧಿಕಾರ ನಡೆಸುವ ವೆಬ್ ಕಾಸ್ಟಿಂಗ್ ಅನ್ನು ಅಳವಡಿಸಿಕೊಳ್ಳುತ್ತಿದೆ ಎಂದರು.

ಪ್ರಾಧಿಕಾರವು ನಡೆಸುವ ಎಲ್ಲ ಪರೀಕ್ಷೆಗಳಲ್ಲಿ ಎಐ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳ ಹಸ್ತ ಮುದ್ರೆ ಸಂಗ್ರಹ ಹಾಗೂ ಮುಖ ಚಹರೆಯನ್ನು ಗುರುತಿಸುವ ತಂತ್ರಜ್ಞಾನವನ್ನು ಬಳಸಲಾಗುತ್ತದೆ. ಇದರಿಂದ ಅಭ್ಯರ್ಥಿಗೆ ಹೊರತಾಗಿ ಮತ್ತೊಬ್ಬ ಅಭ್ಯರ್ಥಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಿ ಬರೆಯುವುದನ್ನು ತಪ್ಪಿಸಲು ಅನುಕೂಲವಾಗಲಿದೆ. ಈ ಸಂಬಂಧಪಟ್ಟಂತೆ 10 ಕೋಟಿ ರೂ. ಮೊತ್ತದ ಟೆಂಡರ್ ಆಹ್ವಾನಿಸಲು ಅನುಮೋದನೆ ನೀಡಲಾಗುತ್ತಿದೆ ಎಂದರು.

ಪದವಿ ಹಾಗೂ ಸ್ನಾತಕೋತ್ತರ ಪದವಿ ಆಧಾರಿತ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 20 ಸಾವಿರಕ್ಕಿಂತ ಕಡಿಮೆ ಅಭ್ಯರ್ಥಿಗಳು ಇದ್ದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ನಿರ್ಧಾರಕ್ಕೂ ಒಪ್ಪಿಗೆ ನೀಡಲಾಗಿದೆ. ಮುಂದಿನ ಎಲ್ಲ ಪರೀಕ್ಷೆಗಳು ಈ ರೀತಿಯ ಅತ್ಯಧುನಿಕ ತಂತ್ರಜ್ಞಾನವನ್ನು ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಲಾಗುತ್ತದೆ ಎಂದು ಹೇಳಿದರು.

ಸಿಇಟಿ ಪ್ರವೇಶ ಪರೀಕ್ಷೆ: ಆ.14ರಿಂದ ನೀಟ್ ಪ್ರವೇಶ ಪರೀಕ್ಷೆ ಆರಂಭವಾಗಲಿದ್ದು, ರಾಜ್ಯದಲ್ಲಿ ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣಕ್ಕೆ ಪ್ರವೇಶ ಪರೀಕ್ಷೆ ಆರಂಭಿಸಲು ನಿರ್ಧರಿಸಲಾಗಿದೆ ಎಂದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್, ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಹಾಗೂ ಸರಕಾರದ ಪ್ರಧಾನ ಕಾರ್ಯದರ್ಶಿ, ಶ್ರೀಕರ್ ವೈದಿಕ ಶಿಕ್ಷಣ ಕಾರ್ಯದರ್ಶಿ ಮೋಹಿನ್, ತಾಂತ್ರಿಕ ಶಿಕ್ಷಣ ಮತ್ತು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್ ಇತರ ಅಧಿಕಾರಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News