ಬಿಎಂಟಿಸಿ ಚಾಲಕರು, ನಿರ್ವಾಹಕರ ಮೇಲೆ ಹಲ್ಲೆ : ಸೂಕ್ತ ಕ್ರಮಕ್ಕಾಗಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಸಚಿವ ರಾಮಲಿಂಗಾರೆಡ್ಡಿ

Update: 2024-10-28 16:07 GMT

ಬಿ.ದಯಾನಂದ್/ರಾಮಲಿಂಗಾರೆಡ್ಡಿ

ಬೆಂಗಳೂರು: ನಗರದಲ್ಲಿ ಕರ್ತವ್ಯ ನಿರತ ಬಿಎಂಟಿಸಿ ಚಾಲಕರು ಹಾಗೂ ನಿರ್ವಾಹಕರ ಮೇಲೆ ಸಾರ್ವಜನಿಕರಿಂದ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಹಲ್ಲೆಗೈದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಬಸ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ ಸಿಬ್ಬಂದಿಗಳ ಮೇಲೆ ಸಾರ್ವಜನಿಕ ಪ್ರಯಾಣಿಕರು ಕ್ಷುಲ್ಲಕ ಹಾಗೂ ವಿನಾಕಾರಣ ಹಲ್ಲೆ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಬಿಎಂಟಿಸಿ ಬಸ್‍ಗಳು ಬೆಂಗಳೂರು ನಗರದ ಜೀವನಾಡಿಯಾಗಿವೆ ಎಂದು ಎಂದು ರಾಮಲಿಂಗಾರೆಡ್ಡಿ ಅವರು ಪತ್ರದಲ್ಲಿ ತಿಳಿಸಿದ್ದಾರೆ

ಆ ಬಸ್‍ಗಳಲ್ಲಿ ಕರ್ತವ್ಯ ನಿರ್ವಹಿಸುವ ನಮ್ಮ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಹಗಲಿರುಳು ಶ್ರಮವಹಿಸಿ ದುಡಿದು, ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ಒದಗಿಸುತ್ತಿದ್ದಾರೆ. ಆದರೆ, ಕಳೆದೊಂದು ತಿಂಗಳಿನಲ್ಲಿ ನಮ್ಮ ಚಾಲನಾ ಸಿಬ್ಬಂದಿಗಳ ಮೇಲೆ ನಡೆದ ಹಲ್ಲೆ ಪ್ರಕರಣಗಳು ಸಿಬ್ಬಂದಿಗಳು ನಿರಾತಂಕವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದೆ ಭೀತಿಯನ್ನುಂಟು ಮಾಡಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ರೀತಿಯ ಪ್ರಕರಣಗಳು ಮರುಕಳಿಸುವುದರಿಂದ ಸಾರಿಗೆ ಸಂಸ್ಥೆಯ ನೌಕರರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದ ವಾತಾವರಣ ನಿರ್ಮಾಣವಾಗುತ್ತಿರುವುದು ಖೇದಕರ. ಆದ್ದರಿಂದ ಈ ಬಗ್ಗೆ ತಾವು ಗಮನಹರಿಸಿ, ಇಂತಹ ಪ್ರಕರಣಗಳಲ್ಲಿ ತಪ್ಪು ಎಸಗಿರುವ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಜರುಗಿಸಿ, ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ನಡೆಯದಂತೆ ನಗರದ ಪೋಲಿಸ್ ಠಾಣೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಸಾರಿಗೆ ಸಿಬ್ಬಂದಿಗಳು ಒತ್ತಡ ಮುಕ್ತವಾಗಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದು ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

Full View

ಜೊತೆಗೆ, ಪತ್ರದಲ್ಲಿ ಸಾರಿಗೆ ನೌಕರರ ಮೇಲೆ ಹಲ್ಲೆ ನಡೆದಿರುವ ದಿನಾಂಕ ಹಾಗೂ ಪ್ರಕರಣ ನಡೆದ ಸ್ಥಳ, ಘಟನೆಗಳ ವಿವರಗಳ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಉಲ್ಲೇಖಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News