ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ | ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಸಚಿವ ತಂಗಡಗಿ ಸೂಚನೆ

Update: 2024-11-26 15:04 GMT

ಬೆಳಗಾವಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ(ವೀರಭೂಮಿ) ಕಾಮಗಾರಿಗಳು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಕಳೆದ 3-4 ವರ್ಷಗಳಿಂದ ಮ್ಯೂಸಿಯಂ ಕಾಮಗಾರಿ ಚಾಲನೆಯಲ್ಲಿದ್ದು, ಚಳಿಗಾಲ ಅಧಿವೇಶನ ಪ್ರಾರಂಭಕ್ಕೂ ಮುನ್ನ ಸಂಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮ್ಯೂಸಿಯಂ ಲೋಕಾರ್ಪಣೆಗೆ ಸಿದ್ಧಗೊಳಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಮಂಗಳವಾರ ನಂದಗಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ(ವೀರಭೂಮಿ) ಕಾಮಗಾರಿ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ಮ್ಯೂಸಿಯಂ ಸೇರಿ ಒಟ್ಟು 261 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 59 ಕೋಟಿ ರೂ. ವೆಚ್ಚದಲ್ಲಿ ಒಟ್ಟು 13 ಎಕರೆ ಜಾಗದಲ್ಲಿ ಮ್ಯೂಸಿಯಂ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ನಂದಗಡ ಮ್ಯೂಸಿಯಂ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಯಾವುದೇ ರೀತಿಯ ಕಾಮಗಾರಿಗಳು ಬಾಕಿ ಉಳಿಯಬಾರದು. ಮುಂದಿನ ಒಂದು ವಾರದೊಳಗೆ ಕಾಂಪೌಂಡ್, ರಸ್ತೆ, ಕಲಾಕೃತಿಗಳು ಸೇರಿದಂತೆ ಅಗತ್ಯ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಶಿವರಾಜ್ ತಂಗಡಗಿ ತಿಳಿಸಿದರು.

ಸಿನಿಮಾ ಆ್ಯನಿಮೇಟರ್ ವಿದ್ಯುನ್ಮಾನ ತಂತ್ರಜ್ಞಾನ ಅಳವಡಿಸಲು ಕೆಲವು ಕಾಮಗಾರಿಗಳು ಬಾಕಿ ಇವೆ. ಅವುಗಳನ್ನು ಕೂಡಲೇ ಪ್ರಾರಂಭಿಸಬೇಕು. ಸರಕಾರದಿಂದ ಗುತ್ತಿಗೆದಾರರ ಬಿಲ್ ಬಾಕಿ ಉಳಿಯದಂತೆ ನೋಡಿಕೊಳ್ಳಲಾಗುವುದು. ಗುತ್ತಿಗೆದಾರರು ಆತಂಕ ಪಡದೆ ಡಿಸೆಂಬರ್ 9 ರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಅವರು ಸೂಚಿಸಿದರು.

ಗುತ್ತಿಗೆದಾರರ ಬಿಲ್ ಗಳನ್ನು ಸಕಾಲದಲ್ಲಿ ಪಾವತಿಸಬೇಕು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಐತಿಹಾಸಿಕ ಕುರುಹುಗಳ ಮರು ಚಿತ್ರಣದಲ್ಲಿ ವಸ್ತು ಸಂಗ್ರಹಾಲಯದಲ್ಲಿ ಯಾವುದೇ ವ್ಯತ್ಯಾಸ ಕಂಡು ಬರದಂತೆ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.

ಸಂಗೊಳ್ಳಿ ರಾಯಣ್ಣ ಅವರ ಪೂರ್ಣ ಪ್ರಮಾಣದ ಪರಿಚಯಕ್ಕೆ ಮ್ಯೂಸಿಯಂ ನಿರ್ಮಾಣ ಮಾಡಲಾಗುತ್ತಿದೆ. ಸಂಗೊಳ್ಳಿ ರಾಯಣ್ಣ ಅಧ್ಯಯನ ಕೇಂದ್ರ, ಗ್ರಂಥಾಲಯ ಸೇರಿದಂತೆ ಸಾಕಷ್ಟು ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಡಿಸೆಂಬರ್ 9 ರಂದು ಅಧಿವೇಶನ ಪ್ರಾರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಡಿಸೆಂಬರ್ ಅಂತ್ಯದೊಳಗೆ ಮ್ಯೂಸಿಯಂ ಉದ್ಘಾಟನೆ ಮಾಡಲಾಗುವುದು ಎಂದು ಶಿವರಾಜ್ ತಂಗಡಗಿ ಹೇಳಿದರು.

ಶಾಲಾ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಇತಿಹಾಸ ಪರಿಚಯ ನಿಟ್ಟಿನಲ್ಲಿ ಸಾಕಷ್ಟು ಅಭಿವೃದ್ಧಿ ಪಡಿಸಲಾಗುವುದು. ಜನರಿಗೆ ಅನುಕೂಲವಾಗುವ ಪ್ರವೇಶ ದರ ನಿಗದಿ ಪಡಿಸಿ ಜಿಲ್ಲೆಯಲ್ಲಿ ಅತ್ಯುತ್ತಮ ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಈಗಾಗಲೇ ಯೋಜನೆ ರೂಪಿಸಲಾಗಿದೆ. ಉನ್ನತ ಮಾದರಿ ಮ್ಯೂಸಿಯಂ ನಿರ್ಮಾಣಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಶಿವರಾಜ್ ತಂಗಡಗಿ ತಿಳಿಸಿದರು.

ಸಭೆಯ ಬಳಿಕ ಸಂಗೊಳ್ಳಿ ರಾಯಣ್ಣ ಸಮಾಧಿ ಸ್ಥಳ ಮತ್ತು ರಾಯಣ್ಣ ಕೆರೆಯಲ್ಲಿ ಪ್ರತಿಮೆ ಸ್ಥಾಪನೆ ಕುರಿತು ಅವರು ಸ್ಥಳ ಪರಿಶೀಲನೆ ನಡೆಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಶಾಸಕ ವಿಠ್ಠಲ ಹಲಗೇಕರ, ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News