ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರಕಾರ ಸಮ್ಮತಿ : ಸಚಿವ ಶಿವಾನಂದ ಪಾಟೀಲ್

Update: 2024-08-24 09:40 GMT

ಶಿವಾನಂದ್ ಪಾಟೀಲ್‌ (PC:@iShivanandpatil)

ಬೆಂಗಳೂರು‌ : ರಾಜ್ಯ ಸರಕಾರದ ಮನವಿಗೆ ಸ್ಪಂದಿಸಿ, ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣಿ ಕುಸಿದ ಕಾರಣ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಗೆ ಅನುಮತಿ ನೀಡುವಂತೆ ರಾಜ್ಯ ಸರಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 22,215 ಮೆಟ್ರಿಕ್ ಟನ್ ಹೆಸರುಕಾಳು ಹಾಗೂ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರಕಾರ ಸಮ್ಮತಿಸಿದೆ. ಬೆಂಬಲ ಬೆಲೆ ಯೋಜನೆಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್‌ಗೆ 8.682 ರೂ. ಹಾಗೂ ಸೂರ್ಯಕಾಂತಿಗೆ 7,280 ರೂ. ಬೆಲೆ ನಿಗದಿಪಡಿಸಲಾಗಿದೆ.

ಕೇಂದ್ರ ಸರಕಾರ ರಾಜ್ಯದ ಪ್ರಸ್ತಾವನೆಗೆ ಸಮ್ಮತಿಸಿರುವುದರಿಂದ ಖರೀದಿ ಏಜನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಧಾರಣಿ ಕುಸಿದಿದೆ ಎಂದು ರೈತರು ಆತಂಕ ಪಡುವ ಅಗತ್ಯವಿಲ್ಲ. ಖರೀದಿ ಕೇಂದ್ರಗಳನ್ನು ಆರಂಭಿಸುತ್ತಿದ್ದಂತೆ ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.

ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯುವ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಟಾಸ್ಕ್ ಪೋರ್ಸ್ ಸಭೆ ನಡೆಸಿ ಅಗತ್ಯ ಇರುವ ಕಡೆ ಖರೀದಿ ಕೇಂದ್ರಗಳನ್ನು ಗುರುತಿಸಿ ನೋಂದಣಿ ಆರಂಭಿಸಲಿದ್ದಾರೆ. ನಂತರ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ವಿಳಂಬ ಮಾಡದೆ ಟಾಸ್ಕ್ ಫೋರ್ಸ್ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ.

ರೈತರ ಹಿತದೃಷ್ಟಿಯಿಂದ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭಿಸಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶಿವಾನಂದ ಪಾಟೀಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News