ಅಲ್ಪಸಂಖ್ಯಾತರ ಶಿಕ್ಷಣಕ್ಕೆ 1,488 ಕೋಟಿ ರೂ.ಮೀಸಲಿಟ್ಟಿದ್ದೇವೆ : ಸಚಿವ ಝಮೀರ್ ಅಹ್ಮದ್

Update: 2024-07-29 14:11 GMT

ಬೆಂಗಳೂರು : ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿ. ನಾನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವನಾದ ನಂತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದೇನೆ. ಒಟ್ಟಾರೆ 3200 ಕೋಟಿ ರೂ. ಬಜೆಟ್ ನಲ್ಲಿ 1488 ಕೋಟಿ ರೂ.ಶಿಕ್ಷಣಕ್ಕೆ ಮೀಸಲಿಟ್ಟಿದ್ದೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಮಂಗಳವಾರ ವಸಂತ ನಗರದಲ್ಲಿರುವ ಮೌಲಾನ ಆಝಾದ್ ಭವನದಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ದೊಡ್ಡದು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಬೇಕು. ಎಸೆಸೆಲ್ಸಿ, ಪಿಯುಸಿ, ಪದವಿ ಶಿಕ್ಷಣದ ಪ್ರಮುಖ ಮೂರು ಹಂತಗಳು. ಈ ಹಂತಗಳನ್ನು ಉತ್ತಮ ಅಂಕದೊಂದಿಗೆ ದಾಟಿದರೆ ನಿಮಗೆ ಉತ್ತಮ ಭವಿಷ್ಯ ಸಿಗಲಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವ್ಯಾಪ್ತಿಯ ಶಾಲೆ ಮತ್ತು ಕಾಲೇಜುಗಳಲ್ಲಿ ಗುಣಮಟ್ಟ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ಬೋಧಕ ವರ್ಗ ಗಮನ ಹರಿಸಬೇಕು ಎಂದು ಅವರು ಕರೆ ನೀಡಿದರು.

ಹಾಸ್ಟೆಲ್‍ಗಳಲ್ಲಿ ಮಕ್ಕಳನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು ಎಂದು ವಾರ್ಡನ್‍ಗಳಿಗೆ ತಿಳಿಸಿದ ಅವರು, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ತೊಂದರೆ ಕೊಡುವವವರನ್ನು ಯಾವುದೆ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ಕೆಎಂಡಿಸಿ)ದ 2024-25ನೇ ಸಾಲಿನ ಮೂರು ಹೊಸ ಯೋಜನೆಗಳಿಗೆ ಚಾಲನೆ ನೀಡಿ ಕೈಪಿಡಿಯನ್ನು ಬಿಡುಗಡೆ ಮಾಡಿದ ಝಮೀರ್ ಅಹ್ಮದ್ ಖಾನ್, ಅರಿವು ಶಿಕ್ಷಣ ಯೋಜನೆಯಡಿಯಲ್ಲಿ ಪರೀಕ್ಷಾ ಪ್ರಾಧಿಕಾರದ ಜತೆ ಒಪ್ಪಂದಕ್ಕೆ ಸಹಿ ಹಾಕಿ 12 ಕೋಟಿ ರೂ. ಚೆಕ್ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್, ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಅನ್ವರ್ ಬಾಷಾ, ರಾಜ್ಯ ಉರ್ದು ಅಕಾಡೆಮಿ ಅಧ್ಯಕ್ಷ ಮುಹಮ್ಮದ್ ಅಲಿ ಖಾಝಿ, ಕೆಎಂಡಿಸಿ ಅಧ್ಯಕ್ಷ ಬಿ.ಕೆ.ಅಲ್ತಾಫ್ ಖಾನ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಸರ್ಫರಾಝ್ ಖಾನ್ ಉಪಸ್ಥಿತರಿದ್ದರು.

ಪ್ರತಿಭಾ ಪುರಸ್ಕಾರ ಪಡೆದ 54 ವಿದ್ಯಾರ್ಥಿಗಳ ಪೈಕಿ ಎಸೆಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 96ಕ್ಕಿಂತ ಹೆಚ್ಚು ಅಂಕ ಪಡೆದ 36 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ದ್ವಿಚಕ್ರ ವಾಹನ ನೀಡುವುದಾಗಿ ಹಾಗೂ ಅಲ್ಪಸಂಖ್ಯಾತ ನಿರ್ದೇಶನಾಲಯದ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ.98ರಷ್ಟು ಅಂಕ ಪಡೆಯುವ ವಿದ್ಯಾರ್ಥಿಗಳನ್ನು ದತ್ತು ಪಡೆದು ಉನ್ನತ ವ್ಯಾಸಂಗದ ಸಂಪೂರ್ಣ ವೆಚ್ಚ ಭರಿಸುವುದಾಗಿ ಸಚಿವ ಝಮೀರ್ ಅಹ್ಮದ್ ಖಾನ್ ಘೋಷಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News