ರಾಜ್ಯದಲ್ಲಿ ಒಂದು ವಾರದ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ

Update: 2024-05-24 16:35 GMT

ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿ 40 ರಿಂದ 50 ಕಿಲೋಮೀಟರ್  ವೇಗದಲ್ಲಿ ಬೀಸಲಿದೆ. ಇದರ ಜೊತೆಗೆ ಸಾಧಾರಣ ಮಳೆಯೂ ಆಗಲಿದೆ. ಇನ್ನು ಉತ್ತರ ಕನ್ನಡ, ಹಾಸನ, ಮಂಡ್ಯ, ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 32 ಡಿಗ್ರಿ ಮತ್ತು 23 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News