ರಾಜ್ಯಕ್ಕೆ ಮುಂಗಾರು ಮಾರುತ ಪ್ರವೇಶ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Update: 2024-06-03 13:14 GMT

ಬೆಂಗಳೂರು : ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ ಆರಂಭವಾಗಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ ಬೆಂಗಳೂರಿನಲ್ಲಿ ಸೋಮವಾರ ಸುರಿದ ಮಳೆ 133 ವರ್ಷದ ದಾಖಲೆಯನ್ನೇ ನಿರ್ಮಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ನೀಡಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬಿರುಗಾಳಿ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದಿದೆ.

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ. ಮಧ್ಯ ಅರೇಬಿಯನ್ ಸಮುದ್ರದ ಭಾಗಗಳು, ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ, ಗೋವಾ, ರಾಯಲಸೀಮಾ, ತೆಲಂಗಾಣ, ಆಂಧ್ರ ಪ್ರದೇಶ, ದಕ್ಷಿಣ ಛತ್ತೀಸ್‍ಗಢ ಮತ್ತು ದಕ್ಷಿಣ ಒಡಿಶಾದ ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಆವರಿಸಿದೆ. ಮುಂದಿನ 4-5 ದಿನಗಳಲ್ಲಿ ಪಶ್ಚಿಮ ಕೇಂದ್ರ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಮುಂಗಾರು ಮಾರುತಗಳು ಅವರಿಸಲಿವೆ ಎಂದು  ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ಹೇಳಿದ್ದಾರೆ.

ಮೆಟ್ರೋ ಸೇವೆ ಆರಂಭ: ರವಿವಾರ ಸುರಿದ ಭಾರೀ ಮಳೆಯಿಂದಾಗಿ ಎಂಜಿ ರಸ್ತೆ ಮತ್ತು ಟ್ರಿನಿಟಿ ನಿಲ್ದಾಣಗಳ ನಡುವಿನ ವಯಡಕ್ಟ್ ಟ್ರ್ಯಾಕ್‍ನಲ್ಲಿ ಮರದ ಕೊಂಬೆಗಳು ಬಿದ್ದಿದ್ದವು. ಹೀಗಾಗಿ ಎಂಜಿ ರಸ್ತೆ ಮತ್ತು ಇಂದಿರಾನಗರ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಯು ಎಂದಿನಂತೆ ಚಲ್ಲಘಟ್ಟದಿಂದ ಮತ್ತು ವೈಟ್‍ಫೀಲ್ಡ್ ನಿಲ್ದಾಣಗಳ ನಡುವೆ ವೇಳಾಪಟ್ಟಿಯಂತೆ ರೈಲುಗಳ ಸೇವೆ ಪುನರ್ ಆರಂಭಿಸಲಾಗಿದೆ ಎಂದು ಸೋಮವಾರದಂದು ನಮ್ಮ ಮೆಟ್ರೋ ಪ್ರಕಟನೆ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News