ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸಿದ ಸಂಸದ ಡಿ.ವಿ ಸದಾನಂದ ಗೌಡ
ಬೆಂಗಳೂರು: ಈ ಬಾರಿಯ ಲೋಕಸಭಾ ಟಿಕೆಟ್ ಕೈತಪ್ಪುವ ವದಂತಿ ನಡುವೆಯೇ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, "ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ" ಎಂದು ಎಂದು ಹೇಳಿದ್ದಾರೆ.
"ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು " ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದಾರೆ.
ಕೈತಪ್ಪಿದ ಟಿಕೆಟ್?
ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದೆ ಎಂದು ತಿಳಿದು ಬಂದಿದೆ.
ದೂರವಾಣಿ ಮೂಲಕ ಸದಾನಂದಗೌಡ ಅವರನ್ನು ಸಂಪರ್ಕಿಸಿರುವ ಬಿಜೆಪಿ ಹೈಕಮಾಂಡ್ ನಾಯಕರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.