ಯಾವುದೇ ಕಾರಣಕ್ಕೂ ವಿಜಯೇಂದ್ರ ಬದಲಾವಣೆ ಇಲ್ಲ : ಯತ್ನಾಳ್‌ಗೆ ತಿರುಗೇಟು ನೀಡಿದ ರೇಣುಕಾಚಾರ್ಯ

Update: 2024-09-27 11:47 GMT

ಬೆಂಗಳೂರು : "ಯಾವುದೇ ಕಾರಣಕ್ಕೂ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿರುವ ಬಿ.ವೈ.ವಿಜಯೇಂದ್ರ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವೇ ಇಲ್ಲ" ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಯತ್ನಾಳ್‌ ಬಣಕ್ಕೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಿಜಯೇಂದ್ರ ರಾಜಾಧ್ಯಕ್ಷರಾದ ಮೇಲೆ ಹೊಸ ಚೈತನ್ಯ ಬಂದಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಮಾಡುತ್ತಿದ್ದಾರೆ. ಅವರನ್ನು ಅಧ್ಯಕ್ಷ ಸ್ಥಾನದಿಂದ ಹೇಗೆ ಕೆಳಗಿಳಿಸುತ್ತಾರೆ ಎಂಬುದನ್ನು ನಾವು ನೋಡುತ್ತೇವೆ" ಎಂದು ಎಚ್ಚರಿಸಿದರು.

ʼಇಲ್ಲಿಯ ತನಕ ನಾವು ಮಾತನಾಡಬಾರದೆಂದು ಸುಮ್ಮನಿದ್ದೇವೆ. ಆದರೆ ಕೆಲವರು ಪಕ್ಷದಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ವರಿಷ್ಠರು. ಅವರನ್ನು ವಿರೋಧ ಮಾಡುತ್ತಿರುವವರು ಇದನ್ನು ಅರ್ಥ ಮಾಡಿಕೊಳ್ಳಬೇಕುʼ ಎಂದರು.

"ರಾಜ್ಯಾಧ್ಯಕ್ಷರಾದ ಮೇಲೆ ವಿಜಯೇಂದ್ರ ಕಾಲಿಗೆ ಚಕ್ರಕಟ್ಟಿಕೊಂಡು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಅವರು ಅಧ್ಯಕ್ಷರಾದ ಮೇಲೆ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಕಾಂಗ್ರೆಸ್ ಅಧಿಕಾರದಿಂದ ಬೇಸತ್ತಿರುವ ಜನತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಗೊಂದಲ ಸೃಷ್ಟಿಸುವುದು ಸರಿಯಲ್ಲ" ಎಂದು ಆಕ್ಷೇಪಿಸಿದರು.

"ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಕೊಡಬೇಕು. ಹಾದಿಬೀದಿಯಲ್ಲಿ ಮಾತನಾಡುವುದರಿಂದ ಉಪಯೋಗವಿಲ್ಲ. ಒಂದು ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದರೆ ನಾವು ಒಪ್ಪಿಕೊಳ್ಳುತ್ತಿರಲಿಲ್ಲವೇ" ಎಂದು ಪ್ರಶ್ನಿಸಿದರು.

ಬೆಂಗಳೂರಿನಿಂದ ಮೈಸೂರಿನವರೆಗೆ ನಡೆದ ಮುಡಾ ಪಾದಯಾತ್ರೆ ಯಶಸ್ವಿಯಾಗಿದೆ. ಇದನ್ನು ಸಹಿಸದವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪಾದಯಾತ್ರೆಯನ್ನು ವಿರೋಧಿಸಿದವರು ಪಕ್ಷದ ಉಳಿವಿಗಾಗಿ ಮಾತನಾಡುತ್ತಿರುವುದು ದುರದೃಷ್ಟಕರ. ನಾವು ಮೌನವಾಗಿ ಇರೋರು ನಮ್ಮ ದೌರ್ಬಲ್ಯವಲ್ಲ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ಪರಿಣಾಮ ಬಿಜೆಪಿ ಪರಿಸ್ಥಿತಿ ಏನಾಯಿತು ಎಂಬುದನ್ನು ನೋಡಿಕೊಳ್ಳಬೇಕು. ಪಕ್ಷ ನಿಷ್ಠೆ ಬಗ್ಗೆ ಮಾತನಾಡುವವರು ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಪ್ರತ್ಯೇಕವಾಗಿ ಸಭೆ ನಡೆಸುತ್ತಾರೆ ಎಂದರೆ ಏನರ್ಥ ಎಂದು ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದರು.

ಶಿಸ್ತುಕ್ರಮ ತೆಗೆದುಕೊಳ್ಳಿ : ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮಾತನಾಡಿ, ಪಕ್ಷದ ವಿರೋಧಿ ಚಟುವಟಿಕೆ ಮಾಡುವವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಎಷ್ಟು ಪಕ್ಷ ಬದಲಾವಣೆ ಮಾಡಿಕೊಂಡು ಬಂದವರು ಇವತ್ತು ಮಾತಾಡುತ್ತಾರೆ. ಬಿಜೆಪಿ ಬಗ್ಗೆ ನಿಯತ್ತು ಇಲ್ಲದೆ, ಜೆಡಿಎಸ್‍ಗೆ ಹೋಗಿದ್ದರು ಎಂದು ಪರೋಕ್ಷವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಭಿನ್ನಮತೀಯರ  ವಿರುದ್ಧ ಕಿಡಿಕಾರಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News