ಮುಡಾ ಪ್ರಕರಣ : ರಾಜ್ಯಪಾಲರ ಮುಂದಿನ ನಡೆ ಏನು?
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ(ಮುಡಾ) ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಸಿದ್ದರಾಮಯ್ಯ ಅವರ ಪಾತ್ರವಿದೆ ಎಂದು ದೂರು ನೀಡಿದ ಬೆನ್ನಲ್ಲಿಯೇ ರಾಜ್ಯಪಾಲರು ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಈ ವಿಚಾರವಾಗಿ ಆ.1ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದಿರುವ ಸಂಪುಟ ಸಭೆಯಲ್ಲಿ ಎರಡು ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು. ಅಕ್ರಮ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸುವುದು ಹಾಗೂ ಈ ಬಗ್ಗೆ ಕಾನೂನು ಹೋರಾಟಕ್ಕೆ ಈ ಸಂಪುಟ ಸಭೆ ನಿರ್ಧರಿಸಿತ್ತು.
ಆದರೆ ಸಂಪುಟದ ನಿರ್ಣಯವನ್ನು ನಿರಾಕರಿಸಿ ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿಸಿದರೆ ಕೋರ್ಟ್ ನಿಂದ ತಡೆಯಾಜ್ಞೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನೀಡಲು ಯಾವುದೇ ಪ್ರಾಥಮಿಕ ತನಿಖಾ ವರದಿ ಅಥವಾ ಆರೋಪ ಧೃಡೀಕರಿಸುವ ವರದಿಗಳಿಲ್ಲ. ಹೀಗಾಗಿ ಯಾವುದಾದರೂ ಸಂಸ್ಥೆಯಿಂದ ತನಿಖೆ ನಡೆಸಿ ವರದಿ ಪಡೆಯಲು ತೀರ್ಮಾನಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಾಥಮಿಕ ತನಿಖೆ ನಡೆಸಿ ತಾಂತ್ರಿಕ ಮತ್ತು ಕಾನೂನಾತ್ಮಕ ಉಲ್ಲಂಘನೆ, ಅಧಿಕಾರ ದುರುಪಯೋಗದ ಸ್ಪಷ್ಟತೆ ದೊರೆತರೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಸಾಧ್ಯತೆ ಇದ್ದು, ಲೋಕಾಯುಕ್ತ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಿ ವರದಿ ಪಡೆಯಲು ರಾಜ್ಯಪಾಲರ ತೀರ್ಮಾನ ಮಾಡುವ ಸಾಧ್ಯತೆ ಇದೆ.