ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ ಈಡಿ

Update: 2024-09-30 15:12 GMT

ಸಿದ್ದರಾಮಯ್ಯ(PTI)

ಬೆಂಗಳೂರು : ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತವರ ಪತ್ನಿ ಪಾರ್ವತಿ ಸೇರಿದಂತೆ ಇನ್ನಿತರರ ವಿರುದ್ಧ ಜಾರಿ ನಿರ್ದೇಶನಾಲಯವು(ಈ.ಡಿ) ಸೋಮವಾರ ‘ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ’ಯಡಿಯಲ್ಲಿ ಪ್ರಕರಣ ದಾಖಲು ಮಾಡಿದೆ.

ಮೈಸೂರು ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ, ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು. ದೇವರಾಜು ಎಂಬವರಿಂದ ಮಲ್ಲಿಕಾರ್ಜುನ ಸ್ವಾಮಿ ಜಮೀನು ಖರೀದಿಸಿ ಅದನ್ನು ಪಾರ್ವತಿಯವರಿಗೆ ಉಡುಗೊರೆಯಾಗಿ ನೀಡಿದ್ದರು.

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದದ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಇದೀಗ ಈಡಿ ‘ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ’(ಪಿಎಂಎಲ್‍ಎ)ಯ ಸೆಕ್ಷನ್‍ಗಳನ್ನು ಉಲ್ಲೇಖಿಸಿರುವುದರಿಂದ ಆರೋಪಿಗಳೆಂದು ಹೆಸರಿಸಲಾಗಿರುವ ವ್ಯಕ್ತಿಗಳನ್ನು ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಗಳಿದ್ದು, ತನಿಖೆಯ ಸಮಯದಲ್ಲಿ ಅವರ ಆಸ್ತಿಗಳನ್ನು ಜಪ್ತಿ ಮಾಡಲೂ ಅವಕಾಶಗಳಿವೆ ಎನ್ನಲಾಗಿದೆ.

ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲನೆ ಆರೋಪಿ (ಎ-1) ಆಗಿದ್ದರೆ, ಅವರ ಪತ್ನಿ ಪಾರ್ವತಿ ಎರಡನೆ ಆರೋಪಿ (ಎ-2) ಆಗಿದ್ದಾರೆ. ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮೂರನೆ ಆರೋಪಿ(ಎ-3)ಯಾಗಿದ್ದರೆ, ಜಾಗದ ಮಾಲಕರಾಗಿದ್ದ ದೇವರಾಜು ನಾಲ್ಕನೇ ಆರೋಪಿ(ಎ-4) ಯಾಗಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News