ಮುಡಾ ಪ್ರಕರಣ | ಪ್ರಾಸಿಕ್ಯೂಷನ್‌ಗೆ ಅನುಮತಿಸಿದರೆ ಕಾನೂನು ಹೋರಾಟ : ಗೃಹ ಸಚಿವ ಜಿ.ಪರಮೇಶ್ವರ್‌

Update: 2024-08-10 12:28 GMT

 ಜಿ.ಪರಮೇಶ್ವರ್‌

ಬೆಂಗಳೂರು : ಮುಡಾ ಪ್ರಕರಣವನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿಸಿದರೆ ಕಾನೂನು ಹೋರಾಟ ನಡೆಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡುವುದಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ, ಕಾನೂನು ಹೋರಾಟ ನಡೆಸುತ್ತೇವೆ. ಕಾನೂನು ಹೋರಾಟ ಪ್ರಾರಂಭವಾದ ಬಳಿಕ ಮುಂದಿನ ಬೆಳವಣಿಗೆ ಏನೆಂಬುದನ್ನು ಗಮನಿಸಿ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ನಿರ್ಧರಿಸಲಾಗುವುದು‌" ಎಂದು ಹೇಳಿದರು.

ʼಹತ್ತಾರು ಪ್ರಕರಣಗಳು ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಉಳಿದಿವೆ. ಯಾವುದಕ್ಕೂ ಕೂಡ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಮುಂದಾಗಿಲ್ಲ. ಮುಡಾ ವಿಚಾರದಲ್ಲಿ ತುರಾತುರಿಯಲ್ಲಿ ನೋಟಿಸ್ ನೀಡಿದ್ದಾರೆ. ಜು.26ರಂದು ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ಮನವಿ ಕೊಡುತ್ತಾರೆ. ಅದೇ ದಿನ ರಾಜ್ಯಪಾಲರು ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯುತ್ತಾರೆ. ಮುಖ್ಯ ಕಾರ್ಯದರ್ಶಿಯವರು ಹೋಗಿ ಸ್ಪಷ್ಟನೆ ನೀಡಿ ಬಂದಿದ್ದಾರೆ.‌ ಅದೇ‌ದಿನ ಸಂಜೆ ಸಿಎಂ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಹಿಂದಿನ ಉದ್ದೇಶ ಏನೆಂಬುದನ್ನು ರಾಜ್ಯಪಾಲರು ಹೇಳಬೇಕಲ್ಲವೇʼ ಎಂದು ಮರುಪ್ರಶ್ನಿಸಿದರು.

ರಾಜ್ಯಪಾಲರು ಸಾಮಾನ್ಯ ರಾಜಕಾರಣಿಯೋ ಅಥವಾ ಅಧಿಕಾರಿಯೋ ಅಲ್ಲ. ಸಂವಿಧಾನದ ಮುಖ್ಯಸ್ಥರು. ಅನೇಕ ಪ್ರಕರಣಗಳು ಅವರ ಕಚೇರಿಯಲ್ಲಿ ಬಾಕಿ ಉಳಿದು, ಯಾವುದಕ್ಕೂ ಗಮನ ಹರಿಸದೇ ಏಕಾಏಕಿ ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇದೆ. ರಾಜ್ಯಪಾಲರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡುತ್ತೇವೆ ಎಂದರು.

ಕಾನೂನು ಪ್ರಕಾರ ಕ್ರಮ :

ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೋರ್ಟ್‌ ನೀಡಿರುವ ತಡೆಯಾಜ್ಞೆಯನ್ನು ತೆರವು ಮಾಡಿಸಲು ಅಡ್ವೋಕೇಟ್ ಜನರಲ್‌ಗೆ ತಿಳಿಸಲಾಗಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು‌.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News