ಮುಡಾ ತೀರ್ಪು | ಗೌರವಯುತವಾಗಿ ಸಿಎಂ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಡಿ : ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹ

Update: 2024-09-24 08:26 GMT

ಸಿದ್ದರಾಮಯ್ಯ/ವಿಜಯೇಂದ್ರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟ್‌ನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ  ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್ ತಿಳಿಸಿದೆ ಎಂದು ವಿಶ್ಲೇಷಿಸಿದರು.

ಹೈಕೋರ್ಟ್‍ನಲ್ಲಿ ಸುದೀರ್ಘ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಟ್ಟಿದ್ದರು. ಕಾಂಗ್ರೆಸ್ಸಿಗರು ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್ ಎಂದು ಆಕ್ಷೇಪಿಸಿದ್ದರು ಎಂದು ಟೀಕಿಸಿದರು.

ಕಳೆದ ಕೆಲವು ತಿಂಗಳಿನಿಂದ ಬಿಜೆಪಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಿರಂತರ ಹೋರಾಟ ನಡೆಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡಿದ್ದೆವು. ನಂತರ ಸ್ವತಃ ಸಿಎಂ ಕುಟುಂಬವೇ ಫಲಾನುಭವಿಗಳಾಗಿರುವ ಮೈಸೂರಿನ ಮುಡಾ ಹಗರಣ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದೆವು. ಬೆಂಗಳೂರು- ಮೈಸೂರು ಪಾದಯಾತ್ರೆಯನ್ನು ನಡೆಸಿ ಬಿಜೆಪಿ- ಜೆಡಿಎಸ್ ಒಟ್ಟಾಗಿ ಯಶಸ್ವಿ ಹೋರಾಟ ಮಾಡಿದ್ದಾಗಿ ವಿವರಿಸಿದರು. 

ರಾಜ್ಯಪಾಲರಿಗೆ ಅನೇಕ ಆರ್‌ಟಿಐ ಕಾರ್ಯಕರ್ತರು ಖಾಸಗಿ ದೂರು ನೀಡಿದ್ದರು. ಸೂಕ್ತ ತನಿಖೆ ನಡೆಸಲು ಒತ್ತಾಯಿಸಿದ್ದರು ಎಂದು ಅವರು ತಿಳಿಸಿದರು.ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಭ್ರಷ್ಟಾಚಾರದ ಕಳಂಕ ಹೊತ್ತ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು. ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ವಿಶ್ವಾಸ ಇದೆ ಎಂದರು.

ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News