ಮೈಸೂರು ದಸರಾ | ಕೆಎಸ್ಸಾರ್ಟಿಸಿಯಿಂದ 2 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ

Update: 2023-10-13 14:35 GMT

ಬೆಂಗಳೂರು, ಅ. 13: ‘ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿಯಿಂದ 2ಸಾವಿರಕ್ಕೂ ಅಧಿಕ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ), ರಾಜಹಂಸ, ಸ್ತ್ರೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಇ.ವಿ.ಪವರ್ ಪ್ಲಸ್, ಅಂಬಾರಿ ಕ್ಲಬ್‍ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‍ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.

ಅ.20ರಿಂದ 26ರ ವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ಸದರಿ ವಾಹನಗಳನ್ನು ಕೆಂಪೇಗೌಡ, ಮೈಸೂರು ರಸ್ತೆ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಆಚರಣೆ ಮಾಡಲಾಗುವುದು. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.24ರಿಂದ ಅ.29ರ ವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

ಮೈಸೂರು ದಸರಾ ಪ್ರಯುಕ್ತ ನಿಗಮದಿಂದ 600 ವಿಶೇಷ ಸಾರಿಗೆ ವ್ಯವಸ್ಥೆ ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 250 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆಆರ್‍ಎಸ್ ಅಣೆಕಟ್ಟು/ಬೃಂದಾವನ ಉದ್ಯಾನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ 350 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 600 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.

ಇ-ಟಿಕೇಟ್ ಬುಕಿಂಗ್‍ನ್ನು http://www.ksrtc.karnataka.gov.in/ ವೆಬ್‍ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದು. ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ಕರಾರಸಾ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ‘ಮಾಹಿತಿ ಕೇಂದ್ರ’ ಪ್ರತ್ಯೇಕವಾಗಿ ತೆರೆಯಲಾಗುವುದು.

ಕರ್ನಾಟಕ ಹಾಗೂ ನೆರೆಯ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಮದುಚೇರಿ ರಾಜ್ಯಗಳಲ್ಲಿರುವ ಒಟ್ಟು 703 ಗಣಕೀಕೃತ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳ ಮೂಲಕ ನಿಗಮದ ಸಾರಿಗೆಗಳಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News