ಜನವರಿಯಿಂದಲೇ ಶಾಲೆಗಳಲ್ಲಿ ನ್ಯಾಪ್ಕಿನ್ ವಿತರಣೆ: ಸಚಿವ ದಿನೇಶ್ ಗುಂಡೂರಾವ್

Update: 2023-12-04 16:14 GMT

ಬೆಳಗಾವಿ: ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು, ಜನವರಿಯಿಂದ ಶಾಲೆ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್‍ಗಳನ್ನ ವಿತರಿಸಲು ನಿರ್ಧರಿಸಲಾಗಿದೆ ಎಂದರು.

ಶುಚಿ ಒಂದು ಮಹತ್ವವಾದ ಯೋಜನೆ. ಹೆಣ್ಣುಮಕ್ಕಳಿಗೆ ಇದು ಅತ್ಯಗತ್ಯವಾಗಿದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಬೇರೆ ಬೇರೆ ಕಾರಣಗಳಿಗೆ ಯೋಜನೆ ಸ್ಥಗಿತವಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ ಶುಚಿ ಯೋಜನೆಗೆ ಮರುಚಾಲನೆ ನೀಡುತ್ತಿದ್ದೇವೆ. ಈಗಾಗಲೇ ನಾಲ್ಕು ವಿಭಾಗವಾರು ಟೆಂಡರ್ ಆಹ್ವಾನಿಸಿ ಬಹುತೇಕ ಪ್ರಕ್ರಿಯೇ ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಯೋಜಿಸಲಾಗಿದೆ. ಸರಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗು ನ್ಯಾಪ್ಕಿನ್ ಗಳನ್ನ ವಿತರಿಸಲಾಗುವುದು. ಈ ಮೊದಲು ಸರಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಕಿನ್‍ಗಳನ್ನು ವಿತರಿಸಲಾಗುತ್ತಿತ್ತು. ಈ ಬಾರಿ ನೇರವಾಗಿ ಶಾಲೆಗೆ ತೆರಳಿ ವಿದ್ಯಾರ್ಥಿನಿಯರಿಗೆ ನ್ಯಾಪ್ಕನ್ ಗಳನ್ನು ವಿತರಿಸುವಂತೆ ಏಜನ್ಸಿಯವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

40.50 ಕೋಟಿ ಯೋಜನೆ ಇದಾಗಿದ್ದು, ಸಂಪೂರ್ಣ ಹಣಕಾಸನ್ನು ರಾಜ್ಯ ಸರಕಾರವೇ ಭರಿಸುತ್ತಿದೆ. ಕೇಂದ್ರ ಸರಕಾರದಿಂದ ಈ ಯೋಜನೆಗೆ ನೆರವು ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದ ಗುಂಡೂರಾವ್, ಪ್ರಾಯೋಗಿಕವಾಗಿ ಮೆನ್‍ಸ್ಟ್ರಲ್ ಮುಟ್ಟಿನ ಕಪ್‍ಗಳನ್ನ ದಕ್ಷಿಣ ಕನ್ನಡ, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 15 ಸಾವಿರ ಮುಟ್ಟಿನ ಕಪ್‍ಗಳನ್ನ ವಿತರಿಸಲಾಗಿದೆ ಎಂದು ಸದನಕ್ಕೆ ಅವರು ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News