‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ : ಶಾಲಾ-ಕಾಲೇಜುಗಳಲ್ಲಿ ಪ್ರತಿಜ್ಞಾ ವಿಧಿ ಬೋಧನೆ ; ಸಚಿವ ಭೋಸರಾಜು

Update: 2024-02-27 18:09 GMT

ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ರಾಜ್ಯದ ಎಲ್ಲ ಶಾಲಾ- ಕಾಲೇಜುಗಳಲ್ಲಿ ನಾಳೆ(ಫೆ.28)ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.

ಮಂಗಳವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜ್ಞಾನ ದಿನದ ಅಂಗವಾಗಿ ಬೆಂಗಳೂರು ನಗರದ ನೆಹರು ತಾರಾಲಯದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯನವರು ವೈಜ್ಞಾನಿಕ ಮನೋಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.

‘ಇದೇ ವೇಳೆ, ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲೂ ವಿದ್ಯಾರ್ಥಿಗಳಿಗೆ ಏಕಕಾಲಕ್ಕೆ ಈ ಪ್ರತಿಜ್ಞಾ ವಿಧಿಯನ್ನು ಭೋಧಿಸುವಂತೆ ಶಾಲಾ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಮೃದ್ದ ಶಾಂತಿಯುತ, ಪ್ರಗತಿಪರ ಸಮಾಜ ಮತ್ತು ದೇಶ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದೆ.

ಸಮಾಜದಲ್ಲಿ ಶಾಂತಿ ಮತ್ತು ಬ್ರಾತೃತ್ವವನ್ನು ಬೆಸೆಯುವ ಹಿನ್ನಲೆಯಲ್ಲಿ ವೈಜ್ಞಾನಿಕ ಮನೋಭಾವದ ನೆಲೆಗಟ್ಟನ್ನು ಸಾರ್ವಜನಿಕರಲ್ಲಿ ಬೆಳೆಸುವುದು ಅತ್ಯಾವಶ್ಯಕವಾಗಿದ್ದು, ಭಾರತದ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದು ಭೋಸರಾಜು ತಿಳಿಸಿದ್ದಾರೆ.

ಅರ್ಥಪೂರ್ಣ ಕಾರ್ಯಕ್ರಮ: ವಿಜ್ಞಾನ ದಿನವನ್ನ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಇಲಾಖೆಯಿಂದ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಸಿಎಂ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಭಾಪತಿ ಬಸವರಾಜ ಹೊರಟ್ಟಿ, ಸ್ಪೀಕರ್ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News