ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು : ಡಾ.ಜಿ.ಪರಮೇಶ್ವರ್
ಬೆಂಗಳೂರು : ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲ್ ಮುಖಂಡ ವಿಕ್ರಂಗೌಡ ಚಟುವಟಿಕೆಗಳ ಮೇಲೆ 20 ವರ್ಷಗಳಿಂದ ನಿಗಾವಹಿಸಲಾಗಿತ್ತು. ಜನ ವಿರೋಧಿ ಕೆಲಸಗಳಲ್ಲಿ ತೊಡಗಿದ್ದ ಎಂಬ ಮಾಹಿತಿ ಇದೆ ಎಂದು ತಿಳಿಸಿದರು.
ಕಾನೂನು ಬಾಹಿರವಾಗಿ, ಅನುಮತಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ. ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ. ನಕ್ಸಲ್ ನಿಗ್ರಹಕ್ಕಾಗಿ ರಾಜ್ಯದಲ್ಲಿ ಮತ್ತು ಬೇರೆಬೇರೆ ರಾಜ್ಯಗಳಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ರಚಿಸಲಾಗಿದೆ. ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಅವರದ್ದು ನಕಲಿ ಎನ್‍ಕೌಂಟರ್ ಅಲ್ಲ ಎಂದು ಸ್ಪಷ್ಟನೆ ನೀಡಿದರು.
ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ಶರಣಾಗುವಂತೆ ವಿಚಾರವಾದಿಗಳು ಮನವಿ ಮಾಡಿದ್ದಾರೆ. ಸಮಾಜದಲ್ಲಿ ನ್ಯಾಯಯುತವಾಗಿ ಪ್ರತಿಭಟನೆ ಮಾಡಿ, ನಕ್ಸಲ್ ಚಟುವಟಿಕೆಗೆ ಸೇರಬೇಡಿ ಎಂದಿದ್ದಾರೆ. ಜತೆಗೆ, ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.