ಪರಿಷತ್ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಅವಿರೋಧ ಆಯ್ಕೆ ಖಚಿತ

Update: 2024-07-02 15:07 GMT

ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಬಾದರ್ಲಿ ನಾಮಪತ್ರ ಸಲ್ಲಿಸುತ್ತಿರುವುದು

ಬೆಂಗಳೂರು : ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಬಾದರ್ಲಿ ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಜು.12ರಂದು ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು(ಜು.2) ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಜು.3ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜು.5ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಬಾದರ್ಲಿ ಮೂರು ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳು ಕ್ರಮ ಬದ್ಧವಾಗಿದ್ದರೆ, ಅವರು ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತ. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಜಗದೀಶ್ ಶೆಟ್ಟರ್, ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದರೂ ಕಾಂಗ್ರೆಸ್ ಸರಕಾರವು ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿತ್ತು.

ಆದರೆ, ಕಾರಣಾಂತರಗಳಿಂದ ಪ್ರಸಕ್ತ ಸಾಲಿನ ಜ.25ರಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್, ಪಕ್ಷ ಬಿಜೆಪಿಗೆ ಮರಳಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಈ ಉಪ ಚುನಾವಣೆ ನಡೆಯುತ್ತಿದೆ. ಜಗದೀಶ್ ಶೆಟ್ಟರ್ ಅವರ ಸದಸ್ಯತ್ವ ಅವಧಿಯೂ 2028ರ ಜೂ.14ರ ವರೆಗೆ ಇತ್ತು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News