ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿಯಿಂದ ಸುಳ್ಳು ವದಂತಿ : ಕೆಪಿಸಿಸಿ ದೂರು

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹಿತೇಂದ್ರ ಅವರಿಗೆ ಕೆಪಿಸಿಸಿ ನಿಯೋಗ ಶುಕ್ರವಾರ ದೂರು ನೀಡಿದೆ.
ನಗರದಲ್ಲಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ನಿಯೋಗ ಹಿತೇಂದ್ರ ಅವರಿಗೆ ದೂರು ನೀಡಿ, ಕಾನೂನು ಕ್ರಮಕ್ಕೆ ಆಗ್ರಹಿಸಿದೆ.
ಡಿ.ಕೆ.ಶಿವಕುಮಾರ್ ಅವರು ಸಂವಿಧಾನವನ್ನು ಬದಲಾಯಿಸುತ್ತೇನೆ ಎಂದು ಎಲ್ಲೂ ಸಹ ಹೇಳಿಕೆ ನೀಡಿಲ್ಲ ಆದರೂ, ಸಹ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಸಂವಿಧಾನವನ್ನು ಅವರು ಬದಲಾಯಿಸುತ್ತೇನೆ ಎಂದು ಹೇಳಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಡಿ.ಕೆ.ಶಿವಕುಮಾರ್ ಅವರು ಮಾಧ್ಯಮದಲ್ಲಿ ಸಂದರ್ಶನ ನೀಡುವಾಗ ಸಂವಿಧಾನದ ಹಾಗೂ ಮೀಸಲಾತಿ ಬಗ್ಗೆ ಪ್ರಶ್ನೆ ಕೇಳಿದಾಗ, ಸಂವಿಧಾನದ ಬಗ್ಗೆ ಸುಪ್ರೀಂ ಕೋರ್ಟ್‍ನಲ್ಲಿ ಹಾಗೂ ಹೈಕೋರ್ಟ್‍ನಲ್ಲಿ ಅನೇಕ ಪ್ರಕರಣಗಳಿವೆ. ಈ ಪ್ರಕರಣಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂಬ ಮಾಹಿತಿಯನ್ನು ತಿಳಿಸಿದ್ದಾರೆ. ಆದರೆ, ಉದ್ದೇಶಪೂರ್ವಕವಾಗಿ ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.
ಸಂಸತ್ತಿನಲ್ಲೂ ಸಹ ಡಿ.ಕೆ ಶಿವಕುಮಾರ್ ಅವರ ಹೇಳಿಕೆನ್ನು ತಿರುಚಿ ಸುಳ್ಳು ಮಾಹಿತಿ ನೀಡಲಾಗಿದೆ. ಆದ್ದರಿಂದ ಕೇಂದ್ರ ಸಚಿವರಾದ ಜೆ.ಪಿ.ನಡ್ಡ ಹಾಗೂ ಕಿರೇನ್ ರಿಜಿಜು ವಿರುದ್ಧ ಕಾನೂನು ಕ್ರಮಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.