ಎಚ್‍ಎಂಪಿವಿ ವೈರಸ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Update: 2025-01-07 15:32 GMT

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಎಚ್‍ಎಂಪಿವಿ ವೈರಸ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಇದು ಮಾರಣಾಂತಿಕವಲ್ಲ. ಅಲ್ಲದೇ, ಪರೀಕ್ಷೆ ಮಾಡುವ ಅಗತ್ಯವು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಮುಖ ಕಾರ್ಯಕ್ರಮಗಳ ಕುರಿತು ಪ್ರಗತಿ ಪರೀಶೀಲನೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 11,182 ಕೋಟಿ ರೂ.ಅನುದಾನ ಒದಗಿಸಲಾಗಿದ್ದು, ಇದುವರೆಗೆ 6593 ಕೋಟಿ ರೂ.ವೆಚ್ಚ ಮಾಡಲಾಗಿದೆ. ಅನುದಾನಕ್ಕೆ ಶೇ.58.96 ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ತಾಯಂದಿರ ಮರಣ ಅನುಪಾತ ದೇಶಕ್ಕೆ ಹೋಲಿಸಿದರೆ ಕಡಿಮೆಯಿದೆ. 2018-20ರ ಅವಧಿಯಲ್ಲಿ ರಾಜ್ಯದಲ್ಲಿ ಒಂದು ಲಕ್ಷಕ್ಕೆ 69 ಮರಣ ಸಂಭವಿಸುತ್ತಿದ್ದು, ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಇದರ ಪ್ರಮಾಣ 55 ಕ್ಕೆ ಇಳಿದಿದೆ. ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸಲು ವ್ಯಾಪಕ ಅಭಿಯಾನ ಆರಂಭಿಸಬೇಕು. ತಾಯಂದಿರ ಮರಣ ತಡೆಗಟ್ಟಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಪ್ರಸೂತಿ ತಜ್ಞರು ಮತ್ತು ಅರವಳಿಕೆ ತಜ್ಞರನ್ನು ನೇಮಕ ಮಾಡಬೇಕು. ಇದಕ್ಕಾಗಿ ಕಡಿಮೆ ಹೆರಿಗೆ ಪ್ರಮಾಣವಿರುವ ಆಸ್ಪತ್ರೆಗಳ ವೈದ್ಯಾಧಿಕಾರಿಗಳನ್ನು ಪುನರ್ ನಿಯೋಜನೆ ಮಾಡಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯಾಧಿಕಾರಿಗಳ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಔಷಧಿ ಖರೀದಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಒಟ್ಟು 3927 ಎಎನ್‍ಎಂ ಖಾಲಿ ಹುದ್ದೆಗಳ ಪೈಕಿ 1205 ಹಾಗೂ 2990 ಎಚ್‍ಐಒ ಖಾಲಿ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಅಗತ್ಯ ಸೇವೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಳಂಬ ಮಾಡಬಾರದು. ಅಲ್ಲದೇ, ಹೆಣ್ಣು ಭ್ರೂಣ ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ತಾಕೀತು ಮಾಡಿದರು.

ಆಸ್ಪತ್ರೆಗಳಲ್ಲಿ ಸ್ವಚ್ಛತೆ, ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು. ನಗರ ಪ್ರದೇಶಗಳಲ್ಲಿ 817 ನಮ್ಮ ಕ್ಲಿನಿಕ್‍ಗಳನ್ನು ಮಂಜೂರು ಮಾಡಲಾಗಿದ್ದು, ಪ್ರಸಕ್ತ 512 ಕಾರ್ಯಾಚರಿಸುತ್ತಿವೆ. ಇವುಗಳನ್ನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳಬೇಕು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ಚಿಕಿತ್ಸಾ ಪ್ಯಾಕೇಜ್ ಮೊತ್ತ ಹೆಚ್ಚಳ ಮಾಡುವ ಕುರಿತು ಪರಿಶೀಲನೆ ಮಾಡಬೇಕು ಎಂದು ಅವರು ಹೇಳಿದರು.

ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಮಗ್ರ ಸುಧಾರಣೆಯಾಗಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಖಾತ್ರಿಪಡಿಸಿದರೆ ಮಾತ್ರ ಜನರ ಖಾಸಗಿ ಆಸ್ಪತ್ರೆಗಳ ಅವಲಂಬನೆ ಕಡಿಮೆ ಮಾಡಬಹುದು ಎಂದು ಸಿದ್ದರಾಮಯ್ಯ ನುಡಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News