ಪರಿಸರ ಸೂಕ್ಷ್ಮ ವಲಯದಲ್ಲಿ ಶಾಶ್ವತ ಕಟ್ಟಡಕ್ಕೆ ಅನುಮತಿ ಇಲ್ಲ: ಹೈಕೋರ್ಟ್ ನಲ್ಲಿ ನಟ ಗಣೇಶ್‍ಗೆ ಹಿನ್ನಡೆ

Update: 2023-08-21 16:19 GMT

ಬೆಂಗಳೂರು, ಆ.21: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸೂಕ್ಷ್ಮ ವಲಯದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗದು ಎಂದು ಸೋಮವಾರ ಹೈಕೋರ್ಟ್ ತಿಳಿಸಿದೆ. ಇದರಿಂದ, ಬಂಡೀಪುರದ ಬಳಿಯ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಚಿತ್ರನಟ ಗಣೇಶ್‍ಗೆ ಹಿನ್ನಡೆಯಾಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಜಕ್ಕಳ್ಳಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅರಣ್ಯ ಇಲಾಖೆ ನೀಡಿದ್ದ ನೊಟೀಸ್ ಪ್ರಶ್ನಿಸಿ ಗಣೇಶ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ತಾತ್ಕಾಲಿಕ ವಾಸದ ಮನೆ ನಿರ್ಮಾಣಕ್ಕೆ ಮಾತ್ರ ಅವಕಾಶವಿದೆ. ಇದರ ಜೊತೆಗೆ, ಯಾವುದೇ ಬೃಹತ್ ಮತ್ತು ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗದು ಎಂದು ತಿಳಿಸಿತು.

ಅಲ್ಲದೇ, ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮವನ್ನು ಪ್ರಶ್ನಿಸಿ ಅರಣ್ಯ ಇಲಾಖೆ ನೀಡಿರುವ ನೊಟೀಸ್‍ಗೆ ಅರ್ಜಿದಾರ ಗಣೇಶ್ ಮುಂದಿನ ಒಂದು ವಾರದಲ್ಲಿ ಉತ್ತರ ನೀಡಬೇಕು. ಈ ಉತ್ತರವನ್ನು ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಿನ ನಾಲ್ಕು ವಾರಗಳಲ್ಲಿ ಪರಿಶೀಲನೆ ನಡೆಸಿ ವಿಚಾರಣೆ ಪೂರ್ಣಗೊಳಿಸಿಬೇಕು ಎಂದು ಸೂಚನೆ ನೀಡಿದೆ. ಆದರೆ, ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಯಾವುದೇ ರೀತಿಯಲ್ಲಿಯೂ ಕಟ್ಟಡ ನಿರ್ಮಾಣ ಕಾಮಗಾರಿ ಪುನರಾರಂಭಿಸಬಾರದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News