ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಇಲ್ಲ: ಹೈಕೋರ್ಟ್

Update: 2023-12-29 13:21 GMT

ಬೆಂಗಳೂರು: ರಾಜಧಾನಿ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಚರ್ಚ್ ಸ್ಟ್ರೀಟ್ ಸೇರಿ ಇತರ ಪ್ರದೇಶಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ನಿರ್ಬಂಧ ಹೇರಲು ಹೈಕೋರ್ಟ್ ನಿರಾಕರಿಸಿದೆ.

ಕೋವಿಡ್ ರೂಪಾಂತರ ಜೆ.ಎನ್.1 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಆಚರಣೆಗೆ ಅನುಮತಿ ನೀಡಬಾರದು ಎಂದು ಹೈಕೋರ್ಟ್ ಗೆ ವಕೀಲ ಎನ್.ಪಿ.ಅಮೃತೇಶ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ.

ಅರ್ಜಿದಾರರೂ ಆಗಿರುವ ವಕೀಲ ಅಮೃತೇಶ್ ಅವರು ವಾದಿಸಿ, ಬೆಂಗಳೂರಿನ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಕಮರ್ಷಿಯಲ್ ಸ್ಟ್ರೀಟ್‍ಗಳಲ್ಲಿ ಹೊಸ ವರ್ಷಾಚರಣೆಗೆ ಇದೇ 31 ರಂದು ಸಾವಿರಾರು ಜನ ಸೇರುತ್ತಾರೆ.

ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಬೇಕು ಎಂದು ಮನವಿ ಮಾಡಿದರು. ಕೋವಿಡ್ ತಡೆಯಲು ಹೊಸ ವರ್ಷಾಚರಣೆಗೆ ನಿರ್ಬಂಧಿಸಬೇಕಾಗುತ್ತದೆ. ರಾಜ್ಯದಲ್ಲೂ ಕೋವಿಡ್ ಹರಡುವ ಭೀತಿ ಎದುರಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಒಂದು ವೇಳೆ ನಗರದಲ್ಲಿ ಹೊಸ ವರ್ಷಾಚರಣೆ ನಿರ್ಬಂಧಿಸಿದರೆ ಜನರು ಹೊರ ಪ್ರದೇಶಗಳಿಗೆ ತೆರಳುತ್ತಾರೆ ಎಂದು ತಿಳಿಸಿತು. ರಾಜ್ಯ ಸರಕಾರ ಸದ್ಯ ಈ ಬಗ್ಗೆ ಯಾವುದೇ ನಿಯಂತ್ರಣಗಳನ್ನು ವಿಧಿಸಿಲ್ಲ. ಕೋವಿಡ್‍ಗೆ ಸದ್ಯಕ್ಕೆ ಹೆದರಬೇಕಾದ ಅಗತ್ಯತೆ ಕಾಣುತ್ತಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪಿಐಎಲ್ ವಿಚಾರಣೆಯನ್ನು ಜನವರಿ ತಿಂಗಳಿಗೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News