ದಲಿತರ ಮೀಸಲಾತಿ ಕುರಿತ ಆಕ್ಷೇಪಾರ್ಹ ನಾಟಕ: ಜೈನ್ ಕಾಲೇಜಿನ ವಿದ್ಯಾರ್ಥಿಗಳ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು, ಜು.20: ಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಲಿತರ ಮೀಸಲಾತಿಗೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಕಿರುನಾಟಕ(ಸ್ಕಿಟ್) ಪ್ರದರ್ಶಿಸಿದ ಆರೋಪದ ಮೇಲೆ ಎಸ್ಸಿ, ಎಸ್ಟಿ(ದೌರ್ಜನ್ಯ ತಡೆ)ಗಳ ಕಾಯ್ದೆಯಡಿ ಬೆಂಗಳೂರು ಜೈನ್ ಯೂನಿವರ್ಸಿಟಿ ಸೆಂಟರ್ ಫಾರ್ ಮ್ಯಾನೇಜ್‍ಮೆಂಟ್ ಸ್ಟಡೀಸ್‍ನ ಏಳು ವಿದ್ಯಾರ್ಥಿಗಳ ವಿರುದ್ಧದ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‍ಐಆರ್ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆ ರದ್ದು ಕೋರಿ ನೈಮಾ ಅಕ್ತರ್ ನಜಾರಿಯಾ ಸೇರಿ ಏಳು ಮಂದಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಮಾಡಿದೆ.
ಎಸ್ಸಿ, ಎಸ್ಟಿ ಸಮುದಾಯದ ಯಾರಿಗೂ ಅಗೌರವ ತೋರಿಲ್ಲ. ನಾಟಕವು ಸಭಾಂಗಣವೊಂದರಲ್ಲಿ ಪ್ರದರ್ಶನವಾಗಿದೆಯೇ ಹೊರತು ಸಾರ್ವಜನಿಕ ಪ್ರದೇಶದಲ್ಲಿ ಅಲ್ಲ. ಪ್ರಕರಣದಿಂದ ಅರ್ಜಿದಾರ ವಿದ್ಯಾರ್ಥಿಗಳು ಕಾಲೇಜಿನಿಂದ ಹೊರಹಾಕಲ್ಪಡುವ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ, ಪ್ರಕರಣವನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.