ಕುಡಿಯುವ ನೀರಿನ ದರ ಹೆಚ್ಚಳದ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ: ಡಿಕೆ ಶಿವಕುಮಾರ್

Update: 2025-01-28 13:46 GMT
Photo of DK Shivakumar

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Photo:X/@DKShivakumar) 

  • whatsapp icon

ಬೆಂಗಳೂರು: ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಮಂಗಳವಾರ ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್‍ಎಸ್‍ಬಿ, ಬಿಎಂಆರ್‍ಡಿಎ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, 2014ರಿಂದ ಇಲ್ಲಿಯವರೆಗೆ 11 ವರ್ಷಗಳಿಂದ ನಗರದಲ್ಲಿ ನೀರಿನ ಬಿಲ್‍ ಅನ್ನು ಹೆಚ್ಚಳ ಮಾಡಿಲ್ಲ. ಈ ಕಾರಣಕ್ಕೆ ಬಿಡಬ್ಲ್ಯೂಎಸ್‍ಎಸ್‍ಬಿಗೆ ವರ್ಷಕ್ಕೆ 1 ಸಾವಿರ ಕೋಟಿ ರೂ. ನಷ್ಟವಾಗುತ್ತಿದೆ. ವಿದ್ಯುತ್ ಬಿಲ್ ಈ ಹಿಂದೆ 35 ಕೋಟಿ ರೂ. ಆಗುತ್ತಿತ್ತು. ಈ ಬಾರಿ 75 ಕೋಟಿ ರೂ. ಆಗಿದೆ. ಇತರೇ ಸೇವೆಗಳು, ಮಾನವ ಸಂಪನ್ಮೂಲ ವೆಚ್ಚ ಸೇರಿದಂತೆ ತಿಂಗಳಿಗೆ 85 ಕೋಟಿ ರೂ. ನಷ್ಟವಾಗುತ್ತಿದೆ ಎಂದು ಮಾಹಿತಿ ನೀಡಿದರು.

ಬಿಲ್ ಹೆಚ್ಚಳ ಅನಿವಾರ್ಯ: ನೀರಿನ ಬಿಲ್ ಹೆಚ್ಚಳ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಕಾರಣಕ್ಕೆ ನಗರದ ಎಲ್ಲ ಶಾಸಕರ ಬಳಿ ಹೋಗಿ ಮಂಡಳಿಯವರು ಚರ್ಚೆ ನಡೆಸಿದ್ದಾರೆ. ಅಲ್ಲದೇ ನೀರಿನ ಜಾಲ ವಿಸ್ತರಣೆ ಮಾಡುವ ಸಲುವಾಗಿ ಅನೇಕ ಬ್ಯಾಂಕ್ ಗಳ ಬಳಿ ಸಾಲ ಕೇಳಲೂ ಆಗುತ್ತಿಲ್ಲ. ಬ್ಯಾಂಕ್ ಅವರು ಮಂಡಳಿ ನಷ್ಟದಲ್ಲಿದೆ ನಾವು ಸಹಾಯ ಮಾಡಲು ಆಗುವುದಿಲ್ಲ ಎನ್ನುತ್ತಿದ್ದಾರೆ. ನಮಗೆ ಹಣ ನೀಡುತ್ತಿರುವ ಜೈಕಾ ಸಂಸ್ಥೆ ಸೇರಿದಂತೆ ಹಲವಾರು ಸಂಸ್ಥೆಗಳು ನೆರವು ಬೇಕು ಎಂದಾದರೆ ಹಣ ವಾಪಸಾತಿಯ ಬಗ್ಗೆ ಭರವಸೆ ನೀಡಿ ಎಂದು ತಿಳಿಸುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಈ ಹಿಂದೆ ಕೊಳೆಗೇರಿ ಹಾಗೂ ಬಡವರ ಉಪಯೋಗಕ್ಕೆ ಸರಕಾರ 20 ಕೋಟಿ ರೂ. ಮೀಸಲಿಟ್ಟಿತ್ತು. ಹಿಂದಿನ ಬಿಜೆಪಿ ಸರಕಾರ ಈ ಸಹಾಯಧನವನ್ನು ನಿಲ್ಲಿಸಿತ್ತು. ಇದನ್ನು ಮುಂದುವರೆಸಲಾಗುವುದು. ಬಡವರಿಗೆ ನೀರು ನೀಡಿದರೂ ಅದು ಕೂಡ ಲೆಕ್ಕಕ್ಕೆ ಸಿಗಬೇಕು. 1 ಪೈಸೆ ಹಣ ನೀಡಿಯಾದರೂ ಸಂಪರ್ಕ ನೀಡಬೇಕು. ಯಾರು ಎಷ್ಟು ನೀರು ಪಡೆಯುತ್ತಿದ್ದಾರೆ ಎನ್ನುವ ಲೆಕ್ಕ ಸರಕಾರಕ್ಕೆ ಸಿಗಬೇಕು. ಅನೇಕ ಕಡೆ ಕೊಳೆಗೇರಿ ಹೆಸರಿನಲ್ಲಿ ಉಳ್ಳವರು ನೀರು ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲರನ್ನು ಒಳಗೊಂಡಿರುವ ತೆರಿಗೆ ಪಾವತಿಗೆ ವ್ಯವಸ್ಥೆ ರೂಪಿಸಿರುವ ಮಾದರಿಯಲ್ಲಿ ನೀರಿನ ಸಂಪರ್ಕ, ಬಳಕೆಯಾಗುವ ನೀರಿನ ಬಗ್ಗೆ ನಿಖರ ಮಾಹಿತಿ ಸಿಗಬೇಕು ಎಂದು ಯೋಜನೆ ರೂಪಿಸಲಾಗಿದೆ. ಬಡವರು, ಶ್ರೀಮಂತರು, ವಸತಿ ಸಮುಚ್ಚಯಗಳು ಹೀಗೆ ಪ್ರತಿಯೊಂದು ಲೆಕ್ಕವೂ ಸಿಗಬೇಕು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಸಾರ್ವಜನಿಕರು ಕೊಂಚವಾದರೂ ಹಣ ಪಾವತಿ ಮಾಡಿ ನೀರಿನ ಸಂಪರ್ಕ ಪಡೆಯಬೇಕು. ಅಕ್ರಮ ಸಂಪರ್ಕ ಪಡೆದಿರುವವರು ಸಕ್ರಮ ಮಾಡಿಕೊಳ್ಳಬೇಕು. ಬಿಡಬ್ಲ್ಯೂಎಸ್‍ಎಸ್‍ಬಿ ಉಳಿವಿಗೆ ಮತ್ತು ಎಲ್ಲರಿಗೂ ನೀರನ್ನು ಒದಗಿಸಿಕೊಡಲು ನಾವು ತೀರ್ಮಾನ ಮಾಡಬೇಕಿದೆ ಎಂದು ಶಿವಕುಮಾರ್ ಮನವಿ ಮಾಡಿದರು.

ಬೇಸಿಗೆಗೆ ಈಗಿನಿಂದಲೇ ತಯಾರಿ: ಮುಂಬರುವ ಬೇಸಿಗೆ ವೇಳೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು ಎನ್ನುವ ಸೂಚನೆ ನೀಡಲಾಗಿದೆ. ಜೊತೆಗೆ ಅಂತರ್ಜಲ ಹೆಚ್ಚಳಕ್ಕೆ ಯಾವುದಾದರೂ ಕೆರೆ ತುಂಬಿಸಬೇಕಿದ್ದರೆ ಈ ಕುರಿತು ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

15 ಸಾವಿರ ನೂತನ ಸಂಪರ್ಕ: ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯಡಿ ಇದುವರೆಗೂ ಸುಮಾರು 15 ಸಾವಿರ ಹೊಸ ಸಂಪರ್ಕಗಳನ್ನು ನೀಡಲಾಗಿದೆ. ಇನ್ನೂ 20 ಸಾವಿರದಷ್ಟು ನೀರಿನ ಸಂಪರ್ಕಗಳನ್ನು ನೀಡಬೇಕಾಗಿದೆ. ಅಲ್ಲದೇ ಸಾಕಷ್ಟು ವಸತಿ ಸಮುಚ್ಚಯಗಳು ನೀರಿನ ಸಂಪರ್ಕಗಳನ್ನು ತೆಗೆದುಕೊಳ್ಳುತ್ತಿಲ್ಲ. ಅವರೆಲ್ಲಾ ಕಡ್ಡಾಯವಾಗಿ ಸಂಪರ್ಕ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಅನೇಕ ಕಡೆ ಸೇವಾ ಶುಲ್ಕ, ಠೇವಣಿ ಶುಲ್ಕ ಸೇರಿದಂತೆ ಇತರೆ ಶುಲ್ಕಗಳನ್ನು ಕಟ್ಟಬೇಕು ಎಂದು ಅಕ್ರಮವಾಗಿ ಸಂಪರ್ಕ ಪಡೆದಿದ್ದಾರೆ. ಇದನ್ನು ತಡೆಯಲು ಸರಕಾರ ಈಗಾಗಲೇ ಕಠಿಣ ಕ್ರಮ ತೆಗೆದುಕೊಂಡಿದೆ. ಪ್ರತಿಯೊಂದು ಮನೆ, ವಸತಿ ಸಮುಚ್ಚಯಕ್ಕೆ ಹೋಗಿ ಜನರಿಗೆ ತಿಳುವಳಿಕೆ ಮೂಡಿಸಿ ನೀರಿನ ಸಂಪರ್ಕ ಪಡೆದುಕೊಳ್ಳುವಂತೆ ಮನವಿ ಮಾಡಲು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.

ವಿದ್ಯುತ್ ಬೆಲೆ ಕಡಿಮೆ ಮಾಡಿದ್ದೇವೆ: ಮೆಟ್ರೋ ಟಿಕೆಟ್ ಬೆಲೆ ಏರಿಕೆ ಬಗ್ಗೆ ಚರ್ಚೆಯಾಗುತ್ತಿದೆ ಜೊತೆಗೆ ನೀರಿನ ಬೆಲೆ ಏರಿಕೆಯಾದರೆ ಜನರಿಗೆ ಹೊರೆಯಾಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ವಿದ್ಯುತ್ ದರವನ್ನು ಕಡಿಮೆ ಮಾಡಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದಾಗಿ ಕೆಲವು ಸೇವೆಗಳ ಬೆಲೆ ಏರಿಕೆ ಆಗುತ್ತಿದೆ. ನೌಕರರಿಗೆ ಶೇ.10ರಷ್ಟು ಸಂಬಳ ಏರಿಕೆ, ಡಿಎ ಏರಿಕೆ ಮಾಡಲಾಗುತ್ತಿದೆಯಲ್ಲವೇ? ಏನೂ ಇಲ್ಲದೇ ಇನ್ನೆಷ್ಟು ದಿನ ಕಡಿಮೆ ಬೆಲೆಗೆ ನೀಡಲು ಆಗುತ್ತದೆ. ಮಂಡಳಿಯಲ್ಲಿ ನೌಕರರು ಸಂಬಳ ನೀಡಿಲ್ಲ ಎಂದು ಜಗಳ ಮಾಡುತ್ತಿದ್ದಾರೆ ಎಂದರು.

ಬಿಡಬ್ಲ್ಯೂಎಸ್‍ಎಸ್‍ಬಿಯಲ್ಲಿಯೂ ಓಟಿಎಸ್ ವ್ಯವಸ್ಥೆ ತರಲಾಗುವುದೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ, ಇದರ ಬಗ್ಗೆ ಆಲೋಚನೆ ಮಾಡಲಾಗುತ್ತಿದೆ. ನೀರಿನ ಬಿಲ್ ಬಾಕಿ ಇಟ್ಟುಕೊಂಡಿರುವವರಿಗೆ ಈ ವ್ಯವಸ್ಥೆ ತರಲು ಅಧಿಕಾರಿಗಳಿಗೆ ವರದಿ ನೀಡಿ ಎಂದು ಸೂಚಿಸಿದ್ದೇನೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News