ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು; ಮನೆಯಿಂದ ಕೆಲಸ ಮಾಡುವಂತಿಲ್ಲ: ಅಧಿಕಾರಿಗಳಿಗೆ ಸಿಎಂ ಸೂಚನೆ

Update: 2023-09-12 12:56 GMT

ಬೆಂಗಳೂರು, ಸೆ.12: ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಅಧಿಕಾರಿಗಳು ಕಚೇರಿಯಲ್ಲಿರಬೇಕು, ಇಲ್ಲ ಪ್ರವಾಸದಲ್ಲಿರಬೇಕು. ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. ಇದರಿಂದ ಜನರಿಗೆ ತೊಂದರೆಯಾಗುವುದನ್ನು ಸಹಿಸುವುದಿಲ್ಲ ಎಂದರು.

ಹಾಗೆಯೇ ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ. ಇದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ, ಅವರ ಕರೆಗಳಿಗೆ ಸ್ಪಂದಿಸಬೇಕು. ಯಾವುದೇ ಪಕ್ಷದ ಶಾಸಕರುಗಳಿರಲಿ ಶಿಷ್ಟಾಚಾರ ಚಾಚೂ ತಪ್ಪದೆ ಪಾಲಿಸಬೇಕು ಎಂದು ಅವರು ಸೂಚಿಸಿದರು.

ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆತನದಿಂದ ಸರಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸುಮ್ಮನೆ ಕೈರುವುದಿಲ್ಲ ಎಂದು ಎಚ್ಚರಿಸಿದ ಅವರು, ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 174 ಪ್ರಕರಣಗಳμÉ್ಟೀ ಇತ್ಯರ್ಥವಾಗಿದೆ. ಉಳಿದ ಪ್ರಕರಣಗಳನ್ನೂ ಶೀಘ್ರವೇ ವಿಲೇವಾರಿ ಮಾಡಿ, ಪರಿಹಾರ ವಿತರಿಸಬೇಕು. ಇದರಲ್ಲಿ ವಿಳಂಬ ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬರ ಘೋಷಣೆಯಾದ ನಂತರ ಖಾಸಗಿ ಲೇವಾದೇವಿದಾರರ ಮೇಲೆ ನಿಗಾ ಇಡಬೇಕು. ಬ್ಯಾಂಕುಗಳು ರೈತರಿಗೆ ಕಿರುಕುಳ ಕೊಡದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆಯಲ್ಲಿ ವೈದ್ಯರು ಲಭ್ಯವಿರುವುದಿಲ್ಲ. ಅರೆ ವೈದ್ಯಕೀಯ ಸಿಬ್ಬಂದಿಯೇ ವೈದ್ಯರ ಪಾತ್ರ ನಿರ್ವಹಿಸುವುದು, ಔಷಧ ಬರೆಯುವುದು ಇವೆಲ್ಲ ಆಗಬಾರದು. ವೈದ್ಯರು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದುಕೊಂಡು ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎನ್ನುವ ಸೂಚನೆ ನೀಡಿದರು.

ಗ್ರಾಮ ಲೆಕ್ಕಿಗರು ಪಂಚಾಯಿತಿಗಳಲ್ಲಿಯೇ ಇರಬೇಕು..!

ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ, ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ ಲೆಕ್ಕಿಗರು ಗ್ರಾಮ ಪಂಚಾಯಿತಿಗಳಲ್ಲೇ ಕುಳಿತು ಕೆಲಸ ಮಾಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು..

ತಾಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News