ಉಡುಪಿ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು : ಕರಾವಳಿ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಉಡುಪಿ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ, ಉತ್ತರ ಕನ್ನಡಕ್ಕೆ ಆ.27, ಆ.28 ಮತ್ತು ಆ.30, ಆ.31ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಆ.26 ಮತ್ತು ಆ.29ರಂದು ಮಾತ್ರ ಆರೆಂಜ್ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆ.29 ಮತ್ತು ಆ.30ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಗಾಳಿ ಬೀಸಲಿದ್ದು, ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಳಿ ಮಳೆ ಬೀಳಲಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಹೆಚ್ಚಿನ ಮಳೆಯ ಸಂಭವ ಉಂಟಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಲಘು ಮಳೆ ಮತ್ತು ನಿರಂತರ ಗಾಳಿ ಇರಲಿದೆ ಎಂದು ಹೇಳಿದೆ.
ಮೀನುಗಾರರಿಗೆ ಎಚ್ಚರಿಕೆ: ಗಾಳಿಯ ವೇಗ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಕರ್ನಾಟಕ ಕರಾವಳಿಯ ಉದ್ದಕ್ಕೂ ಬೀಸಲಿದೆ. ಆದುದರಿಂದ ಮೀನುಗಾರರಿಗೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.