ಮೇ.2ರ ವರೆಗೆ ಬಿಸಿಗಾಳಿ : ರಾಜ್ಯದ 17 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 2ರ ವರೆಗೆ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳು ಹಾಗೂ ದಕ್ಷಿಣ ಎರಡು ಜಿಲ್ಲೆ ಸೇರಿ ರಾಜ್ಯದ 17 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚುತ್ತಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಇನ್ನು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಉಷ್ಣಾಂಶ ಗರಿಷ್ಠ ಮಟ್ಟ ತಲುಪಲಿದೆ ಎಂದು ಮಾಹಿತಿ ಪ್ರಕಟಿಸಿದೆ.
ಬೆಂಗಳೂರಿನಲ್ಲಿ 38.5 ಡಿಗ್ರಿ ಸೆಲ್ಸಿಯಸ್‍ನಷ್ಟು ಗರಿಷ್ಟ ತಾಪಮಾನ ದಾಖಲಾಗುತ್ತಿದ್ದು, ಇದು ಸರ್ವ ಕಾಲಿನ ಇತಿಹಾಸವಾಗಿದೆ ಎಂದು ಹವಾಮಾನ ತಜ್ಞರು ವಿಶ್ಲೇಷಿಸುತ್ತಿದ್ದಾರೆ. ಮುಂದಿನ 5 ದಿನಗಳವರೆಗೆ ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶ ಇರಲಿದ್ದು, ಗರಿಷ್ಠ ತಾಪಮಾನವು 38 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ.