ಸರಕಾರದ ಎಲ್ಲ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಲು ಆದೇಶ
Update: 2024-08-23 16:24 GMT
ಬೆಂಗಳೂರು : ರಾಜ್ಯ ಸರಕಾರದ ಅಧೀನದಲ್ಲಿ ಬರುವ ಎಲ್ಲ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ-ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಆದೇಶಿಸಲಾಗಿದೆ.
ಶುಕ್ರವಾರ ಈ ಸಂಬಂಧ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸುತ್ತೋಲೆ ಹೊರಡಿಸಿದ್ದು, ‘ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ-2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ’ ಎಂದು ತಿಳಿಸಿದ್ದಾರೆ.