ಪಹಲ್ಗಾಮ್ ಭಯೋತ್ಪಾದಕ ದಾಳಿ | ಸಿಎಂ ಸಿದ್ದರಾಮಯ್ಯ ತುರ್ತುಸಭೆ; ಕಾಶ್ಮೀರಕ್ಕೆ ತೆರಳಿದ ರಾಜ್ಯದ ಅಧಿಕಾರಿಗಳು
ಸಿದ್ದರಾಮಯ್ಯ
ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಎಂಬವರು ಬಲಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರಕಾರಿ ನಿವಾಸ ಕಾವೇರಿಯಲ್ಲಿ ತುರ್ತು ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಮಂಗಳವಾರ ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಹಲ್ಗಾಮ್‍ನಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಆಘಾತಕಾರಿ ಘಟನೆಯಲ್ಲಿ ಕನ್ನಡಿಗರು ಬಾಧಿತರಾಗಿದ್ದಾರೆ. ಸುದ್ದಿ ತಿಳಿದ ತಕ್ಷಣ, ನಾನು ತುರ್ತು ಸಭೆ ಕರೆದು ಮುಖ್ಯ ಕಾರ್ಯದರ್ಶಿ ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ ಎಂದು ತಿಳಿಸಿದರು.
ಹೊಸದಿಲ್ಲಿಯ ಸ್ಥಾನಿಕ ಆಯುಕ್ತರೊಂದಿಗೂ ಮಾತನಾಡಿದ್ದೇನೆ. ನನ್ನ ನಿರ್ದೇಶನದಂತೆ, ಎರಡು ತಂಡಗಳನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಲಾಗಿದೆ. ಒಂದು ತಂಡ ಉನ್ನತ ಅಧಿಕಾರಿಗಳಿಂದ ಮತ್ತು ಇನ್ನೊಂದು ಪೊಲೀಸ್ ಸಿಬ್ಬಂದಿಯಿಂದ ಕೂಡಿದೆ ಎಂದು ಅವರು ಹೇಳಿದರು.
ಇದರ ಜೊತೆಗೆ, ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ನೇತೃತ್ವದಲ್ಲಿ ಒಂದು ಸಾಹಸ ತಂಡವನ್ನೂ ಕಳುಹಿಸಲಾಗಿದೆ. ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಾಯವನ್ನು ರಾಜ್ಯ ಸರಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಸಂತೋಷ್ ಲಾಡ್ ಕಾಶ್ಮೀರಕ್ಕೆ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಹಿನ್ನೆಲೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರಕ್ಕೆ ತೆರಳುತ್ತಿದ್ದಾರೆ ಎಂದು ಸಿಎಂ ಸಚಿವಾಲಯ ತಿಳಿಸಿದೆ