ಲಂಬಾಣಿ, ಬೋವಿ, ಕೊರಮ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ಕೈಬಿಡುವಂತೆ ಅರ್ಜಿ ; ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

Update: 2024-04-05 11:35 GMT

ಬೆಂಗಳೂರು : ಲಂಬಾಣಿ (ಬಂಜಾರ), ಬೋವಿ, ಕೊರಮ ಮತ್ತು ಕೊರಚ ಜಾತಿಗಳನ್ನು ಕರ್ನಾಟಕದ ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಕೈಬಿಡಲು ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ರಾಯಚೂರು ಮೂಲದ ಸಿವಿಲ್‌ ಎಂಜಿನಿಯರ್‌ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್‌ ಮಿತ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಮೇಲಿನ ಆದೇಶ ನೀಡಿದೆ‌.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ ಪ್ರತಿವಾದಿಗಳಾದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತೀಯ ಜನಗಣತಿ ಆಯುಕ್ತರು ಮತ್ತು ಪ್ರಧಾನ ರಿಜಿಸ್ಟ್ರಾರ್‌, ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ, ಕೇಂದ್ರ ಚುನಾವಣಾ ಆಯೋಗ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಚುಣಾವಾಣಾ ಆಯೋಗದ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿದೆ.

ಸ್ಪೃಶ್ಯ ಜಾತಿಗಳಾಗಿರುವ ಹಾಗೂ ಪರಿಶಿಷ್ಟ ಜಾತಿಗಳಲ್ಲದ ಲಂಬಾಣಿ (ಬಂಜಾರ) ಕೊರಮ, ಕೊರಚ ಮತ್ತು ಬೋವಿ ಜಾತಿಗಳನ್ನು ಕರ್ನಾಟಕ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಸಂವಿಧಾನದ 14, 16, 17, 46, 243(ಝಡ್‌), 330, 332, 341 ಮತ್ತು 366ನೇ ವಿಧಿಯ ಉಲ್ಲಂಘನೆಯಾಗಿದೆ.

ಈ ಜಾತಿಗಳನ್ನು ಕರ್ನಾಟಕ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರಿಸಿ ಹೊರಡಿಸಲಾದ ಆದೇಶ ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತ ಮನವಿಯನ್ನು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಸಲ್ಲಿಸಬೇಕು. ಆಯೋಗವು ಆ ಮನವಿಯನ್ನು ಪರಿಶೀಲಿಸಿ ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು ಎಂದು 2020ರ ಫೆಬ್ರವರಿ 14ರಂದು ಸುಪ್ರೀಂ ಕೋರ್ಟ್‌ ಆದೇಶಿಸಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.ಆದರೆ ಸುಪ್ರೀಂಕೋರ್ಟ್ ಆದೇಶದಂತೆ ಮನವಿ ಸಲ್ಲಿಸಿದರೂ ಸರಕಾರ ಕ್ರಮ ತೆಗೆದುಕೊಂಡಿಲ್ಲವೆಂದು ಆರೋಪಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News