ಪೆಟ್ರೋಲ್ ದರ ಹೆಚ್ಚಳ | ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಸೇಡು : ಆರ್.ಅಶೋಕ್
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿ ಶನಿವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಈ ನಿರ್ಧಾರಕ್ಕ ವಿಪಕ್ಷ ನಾಯಕ ಆರ್. ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, "ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ. ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ" ಎಂದು ಟೀಕಿಸಿದ್ದಾರೆ.
"ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.