ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ | ದೂರುದಾರ ಮಹಿಳೆಯ ಸಾವಿನ ಕುರಿತು ತನಿಖೆಗೆ ಆಗ್ರಹಿಸಿದ ರಾಜ್ಯ ಮಹಿಳಾ ಆಯೋಗ

Update: 2024-09-02 13:14 GMT

ಯಡಿಯೂರಪ್ಪ (PC : PTI)

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿಯ ಸಾವಿನ ಕುರಿತು ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದಾರೆ.

ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮೀ ಚೌಧರಿ ಆಗ್ರಹಿಸಿದ್ದು, ಆದಷ್ಟು ಬೇಗ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಕೋರಿದ್ದಾರೆ. ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮಹಿಳೆಯ ಸಾವು ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ:

ಮಾಇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ 2024ರ ಮಾರ್ಚ್ 15ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣದಲ್ಲಿ ತಮಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಲು ಫೆ.2ರಂದು ಯಡಿಯೂರಪ್ಪ ಅವರ ನಿವಾಸಕ್ಕೆ ಹೋಗಿದ್ದಾಗ 17 ವರ್ಷದ ತಮ್ಮ ಮಗಳ ಮೇಲೆ ಯಡಿಯೂರಪ್ಪನವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸದಾಶಿವನಗರ ಠಾಣೆಗೆ ದೂರು ನೀಡಿದ್ದರು.

ಅದರನ್ವಯ ಪೋಕ್ಸೊ ಹಾಗೂ ಐಪಿಸಿ ಸೆಕ್ಷನ್354(ಎ)ರಡಿ ಸದಾಶಿವನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.

ಆದರೆ, ದೂರುದಾರ ಮಹಿಳೆ ಮೇ 27ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಉಸಿರಾಟದ ತೊಂದರೆಯಿಂದಾಗಿ ಹುಳಿಮಾವು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ನಿತ್ರಾಣಗೊಂಡು ಸಾವನ್ನಪ್ಪಿದ್ದರು. ಶ್ವಾಸಕೋಶದ ಕ್ಯಾನ್ಸರ್‌ನಿಂದ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು. ಮಹಿಳೆಯ ಸಾವು ಹಾಗೂ ಸಾವಿನ ನಂತರ ಮರಣೋತ್ತರ ಪರೀಕ್ಷೆ ನಡೆದಿರುವುದರ ಕುರಿತು ಅನುಮಾನಗಳಿವೆ ಎಂದು ಸೂಕ್ತ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News