ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ | ಅರ್ಜಿ ವಿಚಾರಣೆ ಮುಂದೂಡಿಕೆ

Update: 2024-11-28 07:14 GMT

ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.2ರ ಮಧ್ಯಾಹ್ನ 2.30ಕ್ಕೆ ನಿಗದಿ ಪಡಿಸಿದೆ.

ಸದಾಶಿವ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ನಡೆಸಿತು.

ಈ ವೇಳೆ ರಾಜ್ಯ ಸರಕಾರದ ಪರ ವಾದ ಮಂಡಿಸಿದ ವಿಶೇಷ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್, ಪ್ರಕರಣದಲ್ಲಿ ಈಗಾಗಲೇ ಚಾರ್ಚ್ ಶೀಟ್ ಸಲ್ಲಿಸಲಾಗಿದೆ. ಪೋಕ್ಸೋ ಕಾಯ್ದೆ ಸೆಕ್ಷನ್ 35ರಲ್ಲಿ ತಿಳಿಸಿರುವಂತೆ, ಪ್ರಕರಣ ಸಂಬಂಧ ಕಾಗ್ನಿಜೆನ್ಸ್ ಪಡೆದ ಬಳಿಕ ಮೂರು ತಿಂಗಳಲ್ಲಿ ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳಬೇಕು. ವಿಳಂಬವಾದಲ್ಲಿ ಅದಕ್ಕೆ ಸೂಕ್ತ ಕಾರಣವನ್ನು ವಿಶೇಷ ನ್ಯಾಯಾಲಯ ದಾಖಲಿಸಬೇಕು ಎಂದು ತಿಳಿಸಲಾಗಿದೆ. ಕಾಗ್ನಿಜೆನ್ಸ್ ಪಡೆದುಕೊಂಡು ಈಗಾಗಲೇ ಆರು ತಿಂಗಳು ಕಳೆದಿದೆ. ಆದ್ದರಿಂದ ಅರ್ಜಿದಾರ ಆರೋಪಿಯನ್ನು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯ್ತಿ ನೀಡಿ ಈ ಹಿಂದೆ ನೀಡಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸುವಂತೆ ಮನವಿ ಮಾಡಿದರು‌.

ಅರ್ಜಿದಾರ ಪರ ಹಾಜರಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್, ಅರ್ಜಿಗೆ ಸಂಬಂಧಿಸಿದಂತೆ ತಮ್ಮ ವಾದವನ್ನು ಸೋಮವಾರ ಪೂರ್ಣಗೊಳಿಸುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿ ಪಡಿಸಲಾಗುವುದು. ಅಂದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿತು.

ಜೊತೆಗೆ ಅರ್ಜಿದಾರ ಯಡಿಯೂರಪ್ಪ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಿಯಿಂದ ವಿನಾಯ್ತಿ ನೀಡಿರುವ  ಆದೇಶವನ್ನು ವಿಸ್ತರಿಸಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News