ಒಬಿಸಿಗಳಿಗೆ ರಾಜಕೀಯ ಬಲ: ಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇ. 33 ಪ್ರಾತಿನಿಧ್ಯ
ಬೆಂಗಳೂರು, ಅ.6: ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ನ್ಯಾ.ಕೆ.ಭಕ್ತವತ್ಸಲ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯಲ್ಲಿನ ಐದು ಶಿಫಾರಸ್ಸುಗಳ ಪೈಕಿ ಮೂರನ್ನು ಅಂಗೀಕರಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಮುಂಬರುವ ಸ್ಥಳೀಯ ನಗರ ಮತ್ತು ಗ್ರಾಮೀಣ ಸಂಸ್ಥೆಗಳಲ್ಲಿ ಶೇ.33 ರಷ್ಟು ಸ್ಥಾನಗಳನ್ನು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸಲು ಮತ್ತು ಒಟ್ಟಾರೆ ಮೀಸಲಾತಿಯು ಶೇ.50 ರಷ್ಟು ಮೀರದಿರುವಂತೆ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಯನ್ನು ಮುಂದುವರೆಸಿಕೊಂಡು ಹೋಗುವಂತೆ ಮಾಡಿರುವ ಶಿಫಾರಸ್ಸಿಗೆ ಅನುಮೋದನೆ ನೀಡಲಾಗಿದೆ ಎಂದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗಳನ್ನು ಹಿಂದುಳಿದ ವರ್ಗದವರಿಗೆ ಮೀಸಲಿರಿಸಲು ಮಾಡಿರುವ ಶಿಫಾರಸ್ಸು ಅನುಮೋದಿಸಲಾಗಿದೆ. ಜೊತೆಗೆ, ಎಲ್ಲ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣಾ ಶಾಖೆಗಳನ್ನು ಡಿ.ಪಿ.ಎ.ಆರ್ ಹತೋಟಿಗೆ ನೀಡಲು ಮಾಡಿರುವ ಶಿಫಾರಸ್ಸನ್ನು ಸಚಿವ ಸಂಪುಟ ಒಪ್ಪಿದೆ. ಡಿ.ಪಿ.ಎ.ಆರ್ ಚುನಾವಣಾ ಶಾಖೆಗಳಿಗೆ ಸಂಬಂಧಿಸಿದಂತೆ ನೋಡಲ್ ಇಲಾಖೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದರು.
ಆದರೆ, ಬಿ.ಬಿ.ಎಂ.ಪಿ ಕಾಯ್ದೆ 2020ರಲ್ಲಿ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ 30 ತಿಂಗಳು ನಿಗದಿಪಡಿಸುವ ವ್ಯವಸ್ಥೆಯನ್ನು ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿಸ್ತರಿಸಲು ಕರ್ನಾಟಕ ಮುನ್ಸಿಪಲ್ ಕಾಯ್ದೆಯ ಕಲಂ 10ಕ್ಕೆ ತಿದ್ದುಪಡಿ ತರಬೇಕೆಂಬ ಶಿಫಾರಸ್ಸಿಗೆ ಸಂಪುಟ ಸಭೆ ಒಪ್ಪಿಗೆ ಸೂಚಿಸಿಲ್ಲ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
ಅಲ್ಲದೆ, 2027-28ರಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ಹಿಂದುಳಿದ ವರ್ಗಗಳ ಕೆಟಗರಿ ಎ ಮತ್ತು ಬಿ ಜೊತೆಗೆ ಅಲ್ಪಸಂಖ್ಯಾತರು ಸೇರಿದಂತೆ ಇತರ ಹಿಂದುಳಿದ ವರ್ಗದವರಿಗಾಗಿ ಪರಿಣಾಮಕಾರಿಯಾದ ರಾಜಕೀಯ ಮೀಸಲು ವ್ಯವಸ್ಥೆ ಕಲ್ಪಿಸಲು ಎರಡು ಹೆಚ್ಚುವರಿ ಕೆಟಗರಿಗಳನ್ನು ಸೇರಿಸಿ ಹಿಂದುಳಿದ ವರ್ಗಗಳ ಮರು ವರ್ಗೀಕರಣ ಮಾಡಲು ಕ್ರಮ ಕೈಗೊಳ್ಳುವಂತೆ ಮಾಡಿರುವ ಶಿಫಾರಸ್ಸುಗಳನ್ನು ಒಪಿಲ್ಲ ಎಂದು ಅವರು ತಿಳಿಸಿದರು.
ಜಾತಿ ಜನಗಣತಿ ಬಗ್ಗೆ ಸಂಪುಟದಲ್ಲಿ ಚರ್ಚೆ
ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿದ ಬೆನ್ನಲ್ಲೆ ರಾಜ್ಯದಲ್ಲಿಯೂ ಹಿಂದುಳಿದ ವರ್ಗಗಳ ಆಯೋಗ ಮಾಡಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಬಹಿರಂಗಪಡಿಸಬೇಕು ಎಂಬ ಕೂಗು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಔಪಚಾರಿಕ ಚರ್ಚೆ ನಡೆದಿದ್ದು, ಆಯೋಗವು ವರದಿಯನ್ನು ಸರಕಾರಕ್ಕೆ ಸಲ್ಲಿಸಿದ ನಂತರ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪುಟದ ಸಹದ್ಯೋಗಿಗಳಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.