ಮುಡಾ ಪ್ರಕರಣ | ಕಾಂಗ್ರೆಸ್ ಸರಕಾರದಿಂದ ರಾಜ್ಯಪಾಲರನ್ನು ಬೆದರಿಸುವ ಕೆಲಸ : ಪ್ರಹ್ಲಾದ್ ಜೋಶಿ
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಾಜ್ಯಪಾಲರನ್ನು ಬೆದರಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ.
ಶನಿವಾರ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ವೇಳೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ಬಾಹಿರವಾಗಿ ಸಚಿವ ಸಂಪುಟ ಸಭೆ ನಡೆಸಿ ರಾಜ್ಯಪಾಲರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ಮುಖ್ಯಮಂತ್ರಿ ಇಲ್ಲದೇ ಸಂಪುಟ ಸಭೆ ಹೇಗೆ ನಡೆಯುತ್ತದೆ? ಸಿಎಂ ಏನಾದರೂ ತಮ್ಮ ಅನುಪಸ್ಥಿತಿಯಲ್ಲಿ ಕ್ಯಾಬಿನೆಟ್ ನಡೆಸಲು ಅಧಿಕೃತವಾಗಿ ಲೆಟರ್ ಕೊಟ್ಟಿದ್ದರೆಯೇ?. ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ವಾಲ್ಮೀಕಿ ಮತ್ತು ಮುಡಾ ಹಗರಣದಲ್ಲಿ ತಮ್ಮ ಪಾತ್ರ ಒಪ್ಪಿಕೊಂಡು ರಾಜೀನಾಮೆ ನೀಡುವುದು ಬಿಟ್ಟು ರಾಜಭವನದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಖಂಡಿಸಿದರು.
ರಾಜ್ಯಪಾಲರು ಸಂವಿಧಾನದ ಪ್ರಕಾರ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಸಿಎಂಗೆ ನೋಟಿಸ್ ನೀಡಿದ ಕಾರಣಕ್ಕೆ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದ್ದಾಗಲ್ಲೆಲ್ಲ ಭ್ರಷ್ಟಾಚಾರ ಹಗರಣಗಳು ನಡೆದಿವೆ ಎಂದು ಜೋಶಿ ಹೇಳಿದರು.