ಪಿಡಿಒ ಸೇರಿ ಇತರ ನೌಕರರ ಕೌನ್ಸೆಲಿಂಗ್ ಮಾದರಿ ವರ್ಗಾವಣೆಗೆ ಸಿದ್ಧತೆ: ಸಚಿವ ಪ್ರಿಯಾಂಕ್ ಖರ್ಗೆ

Update: 2024-01-20 14:07 GMT

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ನೌಕರರ ವರ್ಗಾವಣೆಗಳಿಗಾಗಿ ಮೊದಲ ಬಾರಿಗೆ ಹೊಸ ಪ್ರಯತ್ನ ನಡೆಸುತ್ತಿದ್ದು, 2024-25ನೆ ಸಾಲಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳು ಸೇರಿದಂತೆ ಇಲಾಖೆಯ ನೌಕರರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಸೇವಾ ನಿಯಮಗಳನ್ನು ರೂಪಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಈ ಸಂಬಂಧ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ನೌಕರರ ಹಾಗೂ ಸರಕಾರದ ಹಿತದೃಷ್ಟಿಯನ್ನು ಇರಿಸಿಕೊಂಡು ಕೌನ್ಸೆಲಿಂಗ್ ಮಾದರಿ ವರ್ಗಾವಣೆಗಳನ್ನು ಮುಂದಿನ ಆರ್ಥಿಕ ವರ್ಷದಿಂದ ಜಾರಿಗೊಳಿಸಲಾಗುವುದು, ಪಂಚಾಯತಿ ಮಟ್ಟದಲ್ಲಿ ಅಧಿಕಾರಿಗಳು ಹಾಗೂ ನೌಕರರು ಸೇವಾಮನೋಭಾವದಿಂದ ಗ್ರಾಮೀಣ ಜನರಿಗೆ ನೆರವಾಗಬೇಕೆಂಬುದು ತಮ್ಮ ಆದ್ಯತೆಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಗ್ರಾಮೀಣಾಭಿವೃದ್ಧಿ ಖಾತೆಯನ್ನು ವಹಿಸಿಕೊಂಡ ಆರಂಭದಲ್ಲಿಯೇ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯತಿ ಕಾರ್ಯದರ್ಶಿಗಳ ವರ್ಗಾವಣೆಗಳಲ್ಲಿ ಪಾರದರ್ಶಕತೆಯನ್ನು ತರುವ ಸಲುವಾಗಿ ಕೌನ್ಸೆಲಿಂಗ್ ಪದ್ಧತಿಯನ್ನು ಜಾರಿಗೆ ತರುವುದಾಗಿ ಅವರು ಹೇಳಿದ್ದರು. ಅದರಂತೆ, ಪೂರಕ ಚಟುವಟಿಕೆಗಳು ಆರಂಭಗೊಂಡಿದ್ದು ಈ ಸಂಬಂಧ ಸೇವಾ ನಿಯಮಗಳನ್ನು ರೂಪಿಸುವ ಪ್ರಕ್ರಿಯೆಯ ಹಂತ ತಲುಪಿದೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News