ಲೋಕಸಭೆ ಚುನಾವಣೆಗೆ ಸಿದ್ಧತೆ: ಸೆ.10ಕ್ಕೆ ಬೆಂಗಳೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ
ಬೆಂಗಳೂರು, ಸೆ. 6: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಪ್ರಮುಖರ ಸಭೆ ನಡೆಸಿದರಲ್ಲದೆ, ರಾಜ್ಯದ ಜನರು ಎದುರಿಸುತ್ತಿರುವ ಸಮಸ್ಯೆಗಳು, ಸಂಘಟನೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಿದರು.
ಅಲ್ಲದೆ, ಕಾವೇರಿ ಸಂಕಷ್ಟ, ಬರಗಾಲ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ ಬಗ್ಗೆಯೂ ಸುದೀರ್ಘ ಚರ್ಚೆ ನಡೆಯಿತಲ್ಲದೆ, ಜನಪರ ವಿಷಯಗಳನ್ನು ಇಟ್ಟುಕೊಂಡು ಸರಕಾರದ ವಿರುದ್ಧ ಹೋರಾಟ ರೂಪಿಸಬೇಕು ಎಂದು ಉಭಯ ನಾಯಕರು ಪಕ್ಷದ ಮುಖಂಡರಿಗೆ ಹೋರಾಟದ ದಿಕ್ಸೂಚಿ ನಿಗದಿ ಮಾಡಿದರು.
ಪಕ್ಷ ಬಲಿಷ್ಟವಾಗಿದೆ. ಅದನ್ನು ದುರ್ಬಲಗೊಳಿಸುವ ದುಷ್ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ. ನಾನು ಬದುಕುವುದರ ಒಳಗಾಗಿ ಈ ಪಕ್ಷ ಅಧಿಕಾರಕ್ಕೆ ಬರುತ್ತದೆ. ಅದನ್ನು ನೋಡಿಯೇ ನೋಡುತ್ತೇನೆ. ಈ ಪ್ರಾದೇಶಿಕ ಪಕ್ಷವನ್ನು ಉಳಿಸಿಕೊಳ್ಳಲು ಅವಿರತವಾಗಿ ಹೋರಾಟ ಮಾಡುತ್ತೇನೆ ಎಂದು ದೇವೇಗೌಡ ಹೇಳಿದರು.
ಸೆ.10ಕ್ಕೆ ಸಮಾವೇಶ: ‘ಮುಂಬರುವ ಲೋಕಸಭೆ, ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಇದೇ ತಿಂಗಳು 10ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಬೃಹತ್ ಸಂಘಟನಾ ಸಮಾವೇಶದ ಬಗ್ಗೆ ಚರ್ಚೆ ನಡೆಸಿದ ದೇವೇಗೌಡರು, ‘ಸೋತೆವು ಎಂದು ಸುಮ್ಮನಿದ್ದರೆ ಆಗುವುದಿಲ್ಲ. ಛಲದಿಂದ ಕೆಲಸ ಮಾಡಿದರೆ ಜನರು ಮೆಚ್ಚಿಕೊಳ್ಳುತ್ತಾರೆ.ಎಲ್ಲರೂ ಸೇರಿ ಪಕ್ಷವನ್ನು ಕಟ್ಟೋಣ’ ಎಂದು ಹುರಿದುಂಬಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಬಂಡೆಪ್ಪ ಕಾಶೆಂಪೂರ, ಮಾಜಿ ಸಂಸದ ಕುಪೆಂದ್ರ ರೆಡ್ಡಿ, ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.