ಜಲಜೀವನ್ ಮಿಷನ್ ಕಾಮಗಾರಿಗಳಲ್ಲಿ ಲೋಪವಾಗದಂತೆ ಎಚ್ಚರವಹಿಸಲು ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರು : ಜಲಜೀವನ್ ಮಿಷನ್ ಕಾರ್ಯಕ್ರಮದಡಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಂಗಳವಾರ ನಗರದಲ್ಲಿರುವ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ(ಕೆಆರ್ಐಡಿಎಲ್)ದ ಕಚೇರಿಯಲ್ಲಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಅವರು ಮಾತನಾಡಿದರು.
ಕಳಪೆ ಸಾಮಗ್ರಿಗಳ ಬಳಕೆ ಮಾಡದಂತೆ ಹಾಗೂ ಗುಣಮಟ್ಟವಿಲ್ಲದ ಕಾಮಗಾರಿಗಳು ನಡೆಯದಂತೆ ತಡೆಯಬೇಕು. ಗ್ರಾಮೀಣ ಜನರ ಮನೆ ಮನೆಗೆ ನೀರು ತಲುಪಿಸುವ ಈ ಯೋಜನೆಯಲ್ಲಿ ಸರಕಾರದ ಹಣ ಸಮರ್ಪಕವಾಗಿ ಬಳಕೆಯಾಗುವಂತೆ ಎಚ್ಚರ ವಹಿಸಬೇಕಾಗಿರುವುದು ಅಧಿಕಾರಿಗಳ ಹೊಣೆಗಾರಿಕೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ಗ್ರಾಮ ಪಂಚಾಯತಿಗಳ ಆಸ್ತಿ ತೆರಿಗೆ ಸಂಗ್ರಹಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಮೂಲಕ ಈ ತಿಂಗಳಾಂತ್ಯದೊಳಗೆ ನಿಗದಿತ ಗುರಿಯನ್ನು ಸಾಧಿಸಲು ಮುಂದಾಗಬೇಕು. ಪಂಚಾಯತಿಗಳ ಅಭಿವೃದ್ಧಿಯ ದೃಷ್ಟಿಯಿಂದ ಗ್ರಾಮ ಪಂಚಾಯತಿಗಳ ತೆರಿಗೆಯನ್ನು ಸಮರ್ಪವಾಗಿ ಸಂಗ್ರಹಿಸುವ ಅನಿವಾರ್ಯತೆ ಇದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ತಿಂಗಳಿಗೊಮ್ಮೆ ತೆರಿಗೆ ಸಂಗ್ರಹ ಸಲುವಾಗಿಯೇ ಸಭೆ ನಡೆಸಬೇಕು. ಆದ್ಯತಾ ಕೆಲಸಗಳತ್ತ ವಿಶೇಷ ಗಮನ ನೀಡುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸದೃಢಗೊಳಿಸಬೇಕೆಂದು ಪ್ರಿಯಾಂಕ್ ಖರ್ಗೆ ಕರೆ ನೀಡಿದರು.
ಗ್ರಾಮಸಭೆಗಳನ್ನು ನಡೆಸುವಲ್ಲಿ ಕೆಲವು ಗ್ರಾಮ ಪಂಚಾಯತಿಗಳು ಆಸಕ್ತಿ ತೋರದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಿಯಾಂಕ್ ಖರ್ಗೆ, ಸೋಷಿಯಲ್ ಆಡಿಟ್ ಆಗದೆ ಅನುದಾನ ನಿರೀಕ್ಷಿಸಲು ಸಾಧ್ಯವಿಲ್ಲ, ಇದರಿಂದ ಗ್ರಾಮಗಳ ಅಭಿವೃದ್ಧಿಗೆ ತೊಂದರೆಯಾಗುತ್ತದೆ. ಗ್ರಾಮ ಸಭೆಗಳನ್ನು ನಡೆಸಲು ಸೂಕ್ತ ನಿರ್ದೇಶನ ನೀಡಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಸರಕಾರ ಈ ವರ್ಷದ ಆಯವ್ಯಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ಘೋಷಿಸಿದ ಕಲ್ಯಾಣಪಥ ಯೋಜನೆಯನ್ನು ಈ ತಿಂಗಳು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಅವರು ಪ್ರಕಟಿಸಿದರು.
ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಕಚೇರಿ ಸೂಚಿಸಿರುವ ಮಾನದಂಡಗಳಂತೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕೆಂದು ನಿರ್ದೇಶನ ನೀಡಿದ ಅವರು, ಮಾನದಂಡಗಳನ್ನು ಬದಲಿಸಿ ಕಾಮಗಾರಿಗಳನ್ನು ಕೈಗೊಳ್ಳುವ ಇಂಜಿನಿಯರ್ಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು.
ಈಚೆಗೆ ಬೆಂಗಳೂರಿನಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳ ರಾಜ್ಯ ಮಟ್ಟದ ಶೃಂಗಸಭೆಯಲ್ಲಿ ಪಂಚಸೂತ್ರಗಳನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸಲು ಸೂಚಿಸಲಾಗಿತ್ತು ಎಂದು ಅವರು ಸ್ಮರಿಸಿದರು.
ಅದರಂತೆ, ಜಿಲ್ಲಾ ಮಟ್ಟದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಜಿಲ್ಲೆಯ 19 ಗ್ರಾಮ ಪಂಚಾಯತಿಗಳನ್ನು ದತ್ತು ಪಡೆದು ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ಹಾಕಿಕೊಳ್ಳಲು ಸೂಚಿಸಲಾಗಿತ್ತು, ಈ ಬಗ್ಗೆ ಯಾವುದೇ ಕ್ರಮ ಆಗಿಲ್ಲ ಎಂಬುದನ್ನು ನೆನಪಿಸಿದ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.