ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ : ಪ್ರಿಯಾಂಕ್ ಖರ್ಗೆ

Update: 2025-04-14 19:31 IST
Photo of Priyank Kharge

ಪ್ರಿಯಾಂಕ್ ಖರ್ಗೆ 

  • whatsapp icon

ಬೆಂಗಳೂರು : ಗ್ರಾಮ ಪಂಚಾಯತಿ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮ ಪಂಚಾಯತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶಾಲೆಗಳಿಗೆ ಬೇಸಿಗೆ ರಜೆ ಆರಂಭಗೊಂಡಿದ್ದು, ಬೇಸಿಗೆ ರಜೆ ಅಂತ್ಯಗೊಳ್ಳುವವರೆಗೆ ಎಪ್ರಿಲ್- ಮೇ ತಿಂಗಳಲ್ಲಿ ಶಿಬಿರಗಳನ್ನು ಆಯೋಜಿಸಲಾಗುವುದು. ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಶಿಬಿರದ ನಿರ್ವಹಣೆಯನ್ನು ಅರಿವು ಕೇಂದ್ರದ ಮೇಲ್ವಿಚಾರಕರು, ಗ್ರಾಮ ಪಂಚಾಯತಿ ಪುನರ್ವಸತಿ ಕಾರ್ಯಕರ್ತರು ಮತ್ತು ಗುರುತಿಸಿದ ಸ್ವಯಂ ಸೇವಕರೊಂದಿಗೆ ಪರಿಣಾಮಕಾರಿಯಾಗಿ ಆಯೋಜಿಸಲು ಕ್ರಮ ವಹಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಹದಿನೈದು ದಿನಗಳ ಕಾಲ ಶಿಬಿರವನ್ನು ಆಯೋಜಿಸುವ ಮೂಲಕ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ಆಟಗಳಿಗೆ ಒತ್ತು ನೀಡಲಾಗುವುದು, ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಬೇಸಿಗೆ ಶಿಬಿರವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಓದುವ, ಬರೆಯುವ, ಅಂಕಿ ಸಂಖ್ಯೆ, ವಿಜ್ಞಾನ ವಿಷಯಗಳು, ನಾಯಕತ್ವ ಮತ್ತು ಸಂವಹನ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶವನ್ನು ಹೊಂದಲಾಗಿದೆ. ಪರಿಸರ ಮತ್ತು ಸಾಮಾಜಿಕ ಕಾಳಜಿ ಬೆಳೆಸುವುದು, ಸ್ಥಳೀಯ ಸಂಸ್ಕೃತಿ, ಜೀವನ ಶೈಲಿ, ಇತಿಹಾಸ ಅಂಶಗಳನ್ನು ತಿಳಿಯುವಂತೆ ಅರಿವು ಮೂಡಿಸುವುದು ಹಾಗೂ ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವುದು ಬೇಸಿಗೆ ಶಿಬಿರದ ಆಶಯವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ವಿಜ್ಞಾನಕ್ಕೆ ಸಂಬಂಧಿಸಿದಂತೆ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಕಾಮನಬಿಲ್ಲು ಮೂಡಿಸುವಿಕೆ, ವಿವಿಧ ಗಣಿತದ ಘನಾಕೃತಿಗಳ ಪರಿಚಯ, ಚಿನ್ನಿದಾಂಡು, ಗ್ರಾಮದಲ್ಲಿ ಬಳಸುವ ಅಳತೆ ಮತ್ತು ಮಾಪಕಗಳು, ಟ್ಯಾನ್ಗ್ರ್ಯಾಮ್, ಪೇಪರ್ ಫ್ಯಾನ್, ಜೆಟ್ ಪ್ಲೇನ್, ಕಣ್ಣುಮಿಟುಕಿಸುವ ಗೊಂಬೆ, ಚದುರಂಗ, ಕೇರಂ, ಆಕಾಶ ವೀಕ್ಷಣೆ ಮತ್ತಿತರೆ ಚಟುವಟಿಕೆಗಳನ್ನು ಸ್ಥಳೀಯವಾಗಿ ಹಮ್ಮಿಕೊಳ್ಳಲು ಗ್ರಾಮ ಪಂಚಾಯತಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಯೋಜನಾ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಯೋಜಿಸಲಾಗಿದ್ದು, ಪ್ರಮುಖವಾಗಿ ನಮ್ಮೂರಿನ ಪಕ್ಷಿಗಳು, ನೀರಿನ ಪಯಣ, ನನ್ನ ಊರು, ನಮ್ಮೂರಿನ ಇತಿಹಾಸ, ನಮ್ಮೂರ ಜಾತ್ರೆ, ನಮ್ಮೂರ ಜನಪದ ಗೀತೆಗಳು-ಜನಪದ ಕಥೆ, ನಮ್ಮೂರ ಕ್ರೀಡೆಗಳು, ನಮ್ಮೂರ ಕಲೆಗಳ ಬಗ್ಗೆ ಮಕ್ಕಳಿಗೆ ಮಾಹಿತಿ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಅಂಚೆ ಕಚೇರಿ, ಹಾಲು ಉತ್ಪಾದಕರ ಸಹಕಾರ ಸಂಘ, ಬ್ಯಾಂಕ್, ಪಶುವೈದ್ಯಕೀಯ ಆಸ್ಪತ್ರೆ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯತಿ, ಆಸ್ಪತ್ರೆ ಮುಂತಾದ ಸ್ಥಳಗಳಿಗೆ ಮಕ್ಕಳನ್ನು ಕರೆದೊಯ್ದು ಮಕ್ಕಳಿಗೆ ಪರಿಚಯ ಮಾಡಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News