ನಾಳೆ(ಎ.23) ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಆಗಮನ
ಬೆಂಗಳೂರು : ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರಿಯಾಂಕಾ ಅವರು ನಾಳೆ(ಎ.23) ರಾಜ್ಯಕ್ಕೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಎ.23ರ ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗ ನಗರದ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಪಕ್ಷದಿಂದ ಏರ್ಪಡಿಸಿರುವ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪಾಲ್ಗೊಳ್ಳಲಿದ್ದಾರೆ.
ಆ ಬಳಿಕ ಸಂಜೆ 6ಗಂಟೆಯ ಸುಮಾರಿಗೆ ಬೆಂಗಳೂರಿನ ಎಚ್ಎಸ್ಆರ್ ಬಡಾವಣೆಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಉಸ್ತುವಾರಿ ಜಿ.ಸಿ. ಚಂದ್ರಶೇಖರ್ ತಿಳಿಸಿದ್ದಾರೆ.